ಬಳ್ಳಾರಿ: ಕೊರೊನಾ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಮಾಧ್ಯಮ ಪ್ರತಿನಿಧಿಗಳಿಗೆ ಜೆಡಿಎಸ್‍ನ ರಾಜ್ಯ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ಮೀನಳ್ಳಿ ಡಿ.ತಾಯಣ್ಣ ಅವರು ಜೆಡಿಎಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಆಹಾರ ಧಾನ್ಯಗಳ ಕಿಟ್ ಮತ್ತು ಸ್ಯಾನಿಟೈಸರ್ ವಿತರಿಸಿದ್ರು.
ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡದಂತೆ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾಡಳಿತ, ಆಶಾ ಕಾರ್ಯಕರ್ತೆಯರು, ವಿವಿಧ ಇಲಾಖೆ ಅಧಿಕಾರಿಗಳು, ಹಗಲಿರುಳು ಶ್ರಮಿಸುತ್ತಿದ್ದಾರೆ. ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾಧಿಕಾರಿಗಳು ಮತ್ತು ಎಸ್ಪಿ ಅವರು ತೆಗೆದುಕೊಂಡಿರುವುದರಿಂದ ಜಿಲ್ಲೆಯಲ್ಲಿ ಕೊರೊನಾ ಹರಡುವಿಕೆ ಕಡಿಮೆಯಾಗಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ರು.
ಬಡಜನರು ಸಾಕಷ್ಟು ತೊಂದರೆಗೆ ಒಳಗಾಗಿದ್ದು, ಅನೇಕ ಸಂಘ ಸಂಸ್ಥೆಯ ಪದಾಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು, ಉದ್ಯಮಿಗಳು ಆಹಾರ ಧಾನ್ಯಗಳನ್ನು ವಿತರಿಸುತ್ತಿರುವುದು ಅಭಿನಂದನಾರ್ಹ. ಆದರೆ, ಕೆಲ ಜನ ಪ್ರತಿನಿಧಿಗಳು ಸಾಕಷ್ಟು ಮುಂಜಾಗ್ರತೆ ಕ್ರಮ ತೆಗೆದುಕೊಳ್ಳದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಜನತೆಗೆ ರೇಷನ್ ಕಿಟ್ ವಿತರಣೆ ಮಾಡುತ್ತಿರೋದು ಸರಿಯಲ್ಲ ಎಂದರು.
ಇನ್ನು ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೇ ಮಾರಕ ಕೊರೊನಾ ವೈರಸ್ ಇನ್ನಷ್ಟು ಹರಡುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಆಹಾರ ಧಾನ್ಯಗಳ ವಿತರಕರು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಮನವಿ ಮಾಡಿದರು.