ಹೊಸಪೇಟೆ: ವಿಜಯ ನಗರ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ನಡುವೆ ನೇರ ಪೈಪೋಟಿ ನಡೆಯಲಿದೆ. ಜಾತ್ಯಾತೀತ ಜನತಾದಳ ಅಭ್ಯರ್ಥಿಯನ್ನು ಅಕೌಂಟಿಗೆ ಮಾತ್ರ ಇಟ್ಟಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಸೂರ್ಯನಾರಾಯಣ ರೆಡ್ಡಿ ಹೇಳಿದ್ದಾರೆ.
ನಗರದಲ್ಲಿ ಇಂದು ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಜಾತ್ಯಾತೀತ ಜನತಾದಳ ನಮಗೆ ಪೈಪೋಟಿ ನೀಡಲು ಸಾಧ್ಯವಿಲ್ಲ. ಆ ಪಕ್ಷವು ಅಕೌಂಟಿಗೆ ಮಾತ್ರ ಇರುವುದು. ಅದನ್ನು ಯಾರು ಬೆಂಬಲಿಸುವುದಿಲ್ಲ ಎಂದು ಕೆಪಿಸಿಸಿ ಉಪಾಧ್ಯಕ್ಷ ಸೂರ್ಯನಾರಾಯಣ ರೆಡ್ಡಿ ಕಿಚಾಯಿಸಿದರು.
ಇದೇ ವೇಳೆ ವಿಧಾನ ಪರಿಷತ್ ಸದಸ್ಯ ಕೆ ಸಿ ಕೊಂಡಯ್ಯ ಮಾತನಾಡಿ, ರಾಜ್ಯದಲ್ಲಿ ರೈತರ ಸಮಸ್ಯೆಗಳು ಸಾಕಷ್ಟಿವೆ. ಅವುಗಳನ್ನು ಮೊದಲು ಬಗೆ ಹರಿಸಬೇಕಿದೆ. ಬಿಜೆಪಿ ಅಭ್ಯರ್ಥಿ ಕಾಂಗ್ರೆಸ್ ಪಕ್ಷಕ್ಕೆ ಬಂದು ಮತ್ತೆ ರಾಜೀನಾಮೆ ಯಾಕೆ ನೀಡಬೇಕು ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷದ ಸಿದ್ದಾಂತಗಳನ್ನು ಒಳಗೊಂಡಂತೆ ಮುಂದಿನ ಪ್ರಚಾರದ ಯೋಜನೆಗಳನ್ನು ರೂಪಿಸಲಾಗುವುದು ಎಂದು ಹೇಳಿದರು.