ಬಳ್ಳಾರಿ : ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಪಿಆರ್‌ಒ, ಎಪಿಆರ್‌ಒ ಮತ್ತು ಪಿಒಗಳಿಗೆ ಎರಡನೇ ಹಂತದ ತರಬೇತಿ ಕಾರ್ಯಕ್ರಮ ನಗರದ ಬಿಡಿಎಎ ಫುಟ್ಬಾಲ್ ಸಭಾಂಗಣದಲ್ಲಿಂದು ನಡೆಯಿತು.
ಮಾಸ್ಟರ್ ಟ್ರೈನರ್ ಪನಮೇಶಲು ಎಲ್ಲಾ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನೀಡಿದರು. ಮತದಾನದ ಅಂತಿಮ ಒಂದು ಗಂಟೆಯಲ್ಲಿ ಕೊರೊನಾ ಸೋಂಕಿತರಿಗೆ ಮತದಾನ ಮಾಡಲು ಚುನಾವಣಾ ಆಯೋಗವು ಅವಕಾಶ ಕಲ್ಪಿಸಿರುವ ಹಿನ್ನೆಲೆ ಚುನಾವಣೆಗೆ ನಿಯೋಜಿತರಾದ ಅಧಿಕಾರಿಗಳು ಪಿಪಿಒ ಕಿಟ್ ಧರಿಸುವಿಕೆ ಮತ್ತು ಕೋವಿಡ್ ನಿಯಮಗಳನ್ನು ಪಾಲಿಸುವುದಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಸಿಬ್ಬಂದಿ ಪ್ರಾತ್ಯಕ್ಷಿಕೆ ಮೂಲಕ ತಿಳಿಸಿಕೊಟ್ಟರು.
2 ಹೆಚ್ಚುವರಿ ಮತಕೇಂದ್ರಗಳು ಸೇರಿದಂತೆ ಒಟ್ಟು 28 ಮತಕೇಂದ್ರಗಳನ್ನು ಜಿಲ್ಲೆಯಲ್ಲಿ ಸ್ಥಾಪಿಸಲಾಗುತ್ತಿದೆ. ಬಳ್ಳಾರಿ ಜಿಲ್ಲೆಯಲ್ಲಿ 6,753 ಮತದಾರರಿದ್ದು, ಇದೇ ಅ. 28ರಂದು ಬೆಳಗ್ಗೆ 8 ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ.
ಅಪರ ಜಿಲ್ಲಾಧಿಕಾರಿ ಪಿ.ಎಸ್. ಮಂಜುನಾಥ, ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ ಅವರು ಚುನಾವಣೆಗೆ ನಿಯೋಜಿತರಾದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಾರ್ಯನಿರ್ವಹಿಸುವ ಬಗ್ಗೆ ಹಾಗೂ ಕೋವಿಡ್ ನಿಯಮಗಳ ಕುರಿತು ವಿವರಿಸಿದರು.