ಬಳ್ಳಾರಿ: ನಾಳೆಯಿಂದ ಮೊದಲ ಸುತ್ತಿನ ಕೋವಿಡ್ ಲಸಿಕೆ ಕಾರ್ಯಾರಂಭ ಆಗಲಿರುವ ಹಿನ್ನೆಲೆ ಯಾವುದೇ ಲೋಪ-ದೋಷವಾಗದಂತೆ ಎಚ್ಚರವಹಿಸಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ.ಸುಧಾಕರ್ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿಂದು ನಡೆದ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಸುಸೂತ್ರ ಲಸಿಕಾ ಕಾರ್ಯಕ್ರಮ ಜರುಗುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆ ಕೈಗೊಳ್ಳಬೇಕು. ಇದರ ಸಂಪೂರ್ಣ ಜವಾಬ್ದಾರಿ ಜಿಲ್ಲಾಡಳಿತದ್ದಾಗಿರುತ್ತದೆ. ಪ್ರಧಾನಿ ಮೋದಿ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ತಮ್ಮ ಲಸಿಕಾ ಕೇಂದ್ರಗಳಲ್ಲಿ ಲಸಿಕಾ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದರು.
ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಪಡೆಯುವ ಹಾಗೂ ಕೇಂದ್ರಗಳಿಗೆ ನಿಯೋಜಿತರಾದವರನ್ನ ಹೊರತುಪಡಿಸಿ ಬೇರೆಯವರು ಲಸಿಕಾ ಕೇಂದ್ರದೊಳಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ಅದರಂತೆ ಸೂಕ್ತ ಕ್ರಮವಹಿಸಬೇಕೆಂದು ಡಿಸಿ, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.