ವಿಜಯನಗರ: ಮಗಳನ್ನು ತಾಯಿಯೇ ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ ಹುಲಿಕಟ್ಟೆ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಈ ಬಗ್ಗೆ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೇಗಮ್‌ಬಿ (45) ಎಂಬಾಕೆಯೆ ತನ್ನ ಮಗಳಾದ ಶಮಬಾನು (18)ಳನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ತಾಯಿಯಾಗಿದ್ದಾಳೆ. ಇದೇ ವೇಳೆ ಬೇಗಮ್‌ಬಿ ತನ್ನ ಮಗ ಅಮಾನುಲ್ಲಾ (16) ಮೇಲೆಯೂ ಹಲ್ಲೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಕ್ಕಳು ತನ್ನ ಮಾತು ಕೇಳುತ್ತಿಲ್ಲ ಎಂದು ತಾಯಿ ಹಾಗೂ ಮಕ್ಕಳಿಬ್ಬರ ನಡುವೆ ಶುಕ್ರವಾರ ರಾತ್ರಿ ಕಲಹ ನಡೆದಿದೆ. ಈ ಸಂದರ್ಭದಲ್ಲಿ ತಾಯಿ ಬೇಗಮ್‌ಬಿ ತನ್ನ ಇಬ್ಬರೂ ಮಕ್ಕಳಿಗೆ ಕಟ್ಟಿಗೆಯಿಂದ ಬಲವಾಗಿ ತಲೆಗೆ ಹೊಡೆದಿದ್ದಾರೆ. ಇಬ್ಬರೂ ಮಕ್ಕಳು ರಕ್ತದ ಮಡುವಿನಲ್ಲಿ ಬಿದ್ದಿದ್ದು, ಅವರಿಬ್ಬರೂ ಮೃತಪಟ್ಟಿದ್ದಾರೆ ಎಂದು ತಿಳಿದು ಬಳಿಕ ಬೇಗಮ್‌ಬಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಶನಿವಾರ ಬೆಳಗ್ಗೆ ಸ್ಥಳೀಯರು ನೋಡಿದಾಗ ಶಮಬಾನು ಸ್ಥಳದಲ್ಲೇ ಮೃತಪಟ್ಟಿರುವುದು ಕಂಡುಬಂದಿದೆ. ತಾಯಿ ಬೇಗಮ್‌ಬಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಹಾಗೂ ಗಾಯಾಳು ಅಮಾನುಲ್ಲಾಗೆ ದಾವಣಗೆರೆ ಆಸ್ಪತ್ರೆಗೆ ಚಿಕಿತ್ಸೆಗೆ ಚಿಕಿತ್ಸೆ ಕೊಡಿಸಲಾಗಿದೆ. ಈ ಬಗ್ಗೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಸ್ಥಳಕ್ಕೆ ವಿಜಯನಗರ ಎಸ್ಪಿ ಶ್ರೀಹರಿಬಾಬು ಕೂಡ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.
ಇದನ್ನೂ ಓದಿ: ಭೀಮಾತೀರದಲ್ಲಿ..: ಗ್ರಾಮ ಪಂಚಾಯತಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ