ಬಳ್ಳಾರಿ: ಕನ್ನಡಿಗರಿಗೆ ಉದ್ಯೋಗದಲ್ಲಿ ಹೆಚ್ಚಿನ ಪ್ರಾತಿನಿಧ್ಯ ಸಂಬಂಧಿಸಿದ ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ರಾಜ್ಯವ್ಯಾಪಿ ಬಂದ್ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವೆಡೆ ಸಾಂಕೇತಿಕ ಪ್ರತಿಭಟನೆಗಳು ಮಾತ್ರ ನಡೆದಿದ್ದು ಬಿಟ್ಟರೆ ಬಂದ್ ತೀವ್ರತೆ ಎಲ್ಲೂ ಕಾಣಲಿಲ್ಲ.
ನಗರದ ನಗರೂರು ನಾರಾಯಣರಾವ್ ಪಾರ್ಕ್‌ನಿಂದ ಗಡಿಗಿ ಚನ್ನಪ್ಪ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಮೆರವಣಿಗೆ ಕೈಗೊಂಡ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಕನ್ನಡಪರ ಸಂಘಟನೆಗಳ ಮುಖಂಡ ಹನುಮೇಶ ಮಾತನಾಡಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸುವ ಭರವಸೆ ನೀಡಿದ್ದಾರೆ. ಇದು ಕೇವಲ ಭರವಸೆಯಷ್ಟೇ ಆಗಬಾರದು, ಕೂಡಲೇ ಈಡೇರಿಸಬೇಕು ಎಂದು ಆಗ್ರಹಿಸಿದರು.
ಇನ್ನೋರ್ವ ಕನ್ನಡಪರ ಸಂಘಟನೆಗಳ ಮುಖಂಡ ಪಿ.ಮೋಹನ್ ಮಾತನಾಡಿ, ಬ್ಯಾಂಕ್ ಸೇರಿದಂತೆ ಸರ್ಕಾರದ ಎಲ್ಲಾ ವಲಯಗಳಲ್ಲೂ ಅನ್ಯ ಭಾಷಿಕರನ್ನೇ ಹೆಚ್ಚಿನ ಸಂಖ್ಯೆಯಲ್ಲಿ ನೇಮಕ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಸಾರ್ವಜನಿಕ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಹೆಚ್ಚು ಉದ್ಯೋಗಾವಕಾಶ ಕಲ್ಪಿಸಿಕೊಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.