ಬಳ್ಳಾರಿ: ಕೋವಿಡ್ ಮುಂಜಾಗ್ರತಾ ಕ್ರಮಗಳೊಂದಿಗೆ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಆಚರಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಸೆ. 17ರಂದು ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಉತ್ಸವ ದಿನಾಚರಣೆಯನ್ನು ಆಚರಿಸಲಾಗುವುದು. ಜಿಲ್ಲಾಡಳಿತದ ವೆಬ್‍ಸೈಟ್ ಮೂಲಕವೂ ಕಾರ್ಯಕ್ರಮವನ್ನು ನೇರಪ್ರಸಾರ ಮಾಡಲಾಗುತ್ತದೆ ಎಂದು ಹೇಳಿದರು.
ಸೆ. 17ರಂದು ಬೆಳಗ್ಗೆ 9ಕ್ಕೆ ಬಳ್ಳಾರಿ ಅರಣ್ಯ, ಪರಿಸರ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್.ಆನಂದ್ ಸಿಂಗ್ ಅವರು ಧ್ವಜಾರೋಹಣ ಕಾರ್ಯ ನೆರವೇರಿಸಿ, ನಂತರ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಿದ್ದಾರೆ ಎಂದು ವಿವರಿಸಿದ ಮಂಜುನಾಥ, ನಂತರ ಸಿರಿಗೇರೆ ಪೊನ್ನರಾಜ್ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದರು.
ಜಿಲ್ಲಾಡಳಿತದ ಮೂಲಕ ನೇರ ಪ್ರಸಾರ: ಕೊರೊನಾ ಕಾರಣ ಈ ಬಾರಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಕಾರ್ಯಕ್ರಮಕ್ಕೆ ಆಗಮಿಸದ ಹಿನ್ನೆಲೆ ಅವರು ಮನೆಯಲ್ಲಿಯೇ ಕುಳಿತುಕೊಂಡು ಬಳ್ಳಾರಿ ಜಿಲ್ಲಾಡಳಿತದ ballari.nic.in ವೆಬ್ಸೈಟ್ನಲ್ಲಿ ನೇರ ಪ್ರಸಾರವನ್ನು ವೀಕ್ಷಿಸಲು ಅವಕಾಶ ಮಾಡಿಕೊಡಲಾಗುತ್ತಿದೆ.