ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ಬಾರಿಯ ವಿಧಾನಸಭೆ ಚುನಾವಣೆಗೆ ಹೋಲಿಸಿದರೆ ಈ ಬಾರಿಯ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಿವೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಲ್ಲಿ ಬಳ್ಳಾರಿ ಜಿಲ್ಲೆಯ ಪಾಲು ಮಹತ್ವದ್ದಾಗಿದೆ.
ಆದರೆ ಬದಲಾದ ಸನ್ನಿವೇಶದಲ್ಲಿ ರಾಜ್ಯ ರಾಜಕಾರಣದಲ್ಲಿ ಉಂಟಾದ ಅರಾಜಕತೆಗೆ ಸಂಬಂಧಪಟ್ಟಂತೆ ಬಳ್ಳಾರಿ ಜಿಲ್ಲೆಯ ಜನತೆ ತಮ್ಮ ಮನದಾಳದ ಮಾತುಗಳನ್ನು 'ಈಟಿವಿ ಭಾರತ'ನೊಂದಿಗೆ ಹಂಚಿಕೊಂಡಿದ್ದಾರೆ. ಸರ್ಕಾರ ಮತ್ತು ಜನಪ್ರತಿನಿಧಿಗಳ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಸಮ್ಮಿಶ್ರ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗ್ತಾ ಇಲ್ಲ. ಬದಲಿಗೆ ಅವರ ಹಣಕಾಸಿನ ಅಭಿವೃದ್ಧಿಯ ಬಗ್ಗೆ ಶಾಸಕರು, ಸಚಿವರು ಅಲೋಚನೆಯನ್ನು ಮಾಡ್ತಾ ಇದ್ದಾರೆ. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ, ರಸ್ತೆಗಳ ಅಭಿವೃದ್ಧಿ, ಸರ್ಕಾರಿ ಯೋಜನೆಗಳ ಸಮರ್ಪಕ ಅನುಷ್ಠಾನ ಕಾರ್ಯಗಳು ನಡೆಯುತ್ತಿಲ್ಲ ಎಂದು ಸರ್ಕಾರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಇನ್ನು ಕೆಲವರು ಇವರನ್ನೆಲ್ಲ ಆಯ್ಕೆ ಮಾಡಿ ಕಳಿಸಿರುವುದೇ ತಮ್ಮ ದೌರ್ಭಾಗ್ಯ. ರಾಜ್ಯದಲ್ಲಿನ ರಾಜಕೀಯ ಅಸ್ಥಿರತೆ ತೊಲಗಿ ರಾಷ್ಟ್ರಪತಿ ಆಳ್ವಿಕೆ ಬರಲಿ ಎಂದು ಜನರು ಆಗ್ರಹಿಸಿದ್ದಾರೆ.