ಬಳ್ಳಾರಿ: ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಕಂಪ್ಲಿಯಲ್ಲಿ ಶಾಸಕ ಗಣೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿ ವಿರುದ್ಧ ಶಾಸಕ ಜೆ.ಎನ್.ಗಣೇಶ್ ನೇತೃತ್ವದಲ್ಲಿ ಕಂಪ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಮತ್ತು ರೈತರು ಪಟ್ಟಣದಲ್ಲಿ ಕಿಸಾನ್ ಅಧಿಕಾರ್ ದಿವಸ್ ರೈತ ಧ್ವನಿ ಎನ್ನುವ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಎಪಿಎಂಸಿ ಕಚೇರಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ನಂತರ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ರೈತರು ಕೇಂದ್ರ ಮತ್ತು ರಾಜ್ಯದ ಸರ್ಕಾರದ ವಿರುದ್ಧ ದಿಕ್ಕಾರ ಕೂಗುತ್ತಾ ತಹಶೀಲ್ದಾರ್ ಕಚೇರಿಗೆ ತೆರಳಿ, ನಂತರ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಪತ್ರ ಹಸ್ತಾಂತರಿಸಿದರು.
ನಂತರ ಶಾಸಕ ಜೆ.ಎನ್.ಗಣೇಶ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿ ಮಾಡಿದ ರೈತ ವಿರೋಧಿ ಕಾಯ್ದೆಗಳ ವಿರುದ್ಧ ರಾಜ್ಯ ಮಟ್ಟದಲ್ಲಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ರಾಜಭವನ ಮುತ್ತಿಗೆ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಕಂಪ್ಲಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ರೈತರ ಚಳವಳಿ ಹತ್ತಿಕ್ಕುವ ಹುನ್ನಾರ ಬಿಜೆಪಿಯದ್ದಾಗಿದೆ. ರೈತರು ಹೋರಾಟ ಮಾಡದಂತೆ ಅಧಿಕಾರ ದುರುಪಯೋಗ ಮಾಡುತ್ತಿದೆ. ಕೇಂದ್ರ ಸರ್ಕಾರ ದೇಶದಲ್ಲಿ ಹಿಟ್ಲರ್ ಆಡಳಿತ ನಡೆಸುತ್ತಿದೆ. ದೇಶ ಮತ್ತು ರಾಜ್ಯದಲ್ಲಿ ಹಿಂದುಳಿದ ವರ್ಗದ ರೈತರಿದ್ದಾರೆ. ಬಿಜೆಪಿ ಇರುವವರೆಗೂ ದೇಶದಲ್ಲಿ ರೈತರಿಗೆ ಹಾಗೂ ಕಾರ್ಮಿಕರಿಗೆ ಉಳಿಗಾಲವಿಲ್ಲ ಎಂದರು.
ಇದನ್ನೂ ಓದಿ: ಕಾಂಗ್ರೆಸ್ ‘ರಾಜಭವನ ಚಲೋ’- ರಾಜಭವನದತ್ತ ತೆರಳುತ್ತಿರುವ ಪ್ರತಿಭಟನಾಕಾರರು