ಬಳ್ಳಾರಿ: ಸಕಾಲದಲ್ಲಿ ಕುಡಿಯುವ ನೀರನ್ನು ಹರಿಬಿಡಬೇಕೆಂದು ಆಗ್ರಹಿಸಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮಸ್ಥರು ಇಂದು ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ರಾರಾವಿ ಗ್ರಾಮದ ಹತ್ತಾರು ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ದಿಢೀರನೆ ಮುತ್ತಿಗೆ ಹಾಕಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಎಲ್ಲ ಜನಪ್ರತಿನಿಧಿಗಳು ರೆಸಾರ್ಟ್ನತ್ತ ಮುಖಮಾಡಿ ಮೋಜು-ಮಸ್ತಿ ಮಾಡುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಹಕ್ಕನ್ನು ಚಲಾಯಿಸಿದ ಮತದಾರರು ಕನಿಷ್ಠ ಕುಡಿಯುವ ನೀರಿಗೂ ಕೂಡ ಹೋರಾಟ ಮಾಡಬೇಕಾದ ಸ್ಥಿತಿ ಎದುರಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಕುಡಿಯುವ ನೀರು ಸಹ ಪೂರೈಕೆ ಮಾಡಲು ಸಾಧ್ಯವಾಗದ ಜನಪ್ರತಿನಿಧಿಗಳು ನಮಗ್ಯಾಕೆಂದು ಪ್ರಶ್ನೆ ಮಾಡಿದ್ದಲ್ಲದೇ, ಸತತ ಎರಡು ವರ್ಷಗಳ ಕಾಲದಿಂದ ನಮಗೆ ಈ ಸಮಸ್ಯೆ ಇದೆ. ನಮ್ಮ ಸಮಸ್ಯೆಗಳ ಬಗ್ಗೆ ಯಾರೂ ಕೂಡ ತಲೆಕೆಡಿಸಿಕೊಳ್ಳುತ್ತಿಲ್ಲ. ಹೀಗೆ ಮುಂದುವರೆದರೇ, ನಮ್ಮಗತಿ ಏನೆಂದು ಹಿಗ್ಗಾಮುಗ್ಗಾ ಜಾಡಿಸಿದ್ದಾರೆ. ಈ ಕೂಡಲೇ ಕುಡಿಯುವ ನೀರು ಪೂರೈಕೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.