ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಬ್ಯಾಡಗಿ ಮೆಣಸಿನಕಾಯಿ ಖರೀದಿ ಮಾರುಕಟ್ಟೆ ಸ್ಥಾಪನೆಗೆ ಚಿಂತನೆ ನಡೆಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರೈತರೊಂದಿಗೆ ನಡೆಸಿದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ಡೌನ್ ಆಗಿದ್ದರಿಂದ ಬ್ಯಾಡಗಿ ಮೆಣಸಿನಕಾಯಿ ಮಾರಾಟ ಸ್ಥಗಿತವಾಗಿದೆ. ಹೀಗಾಗಿ ಇಲ್ಲಿಯೇ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಸ್ಥಾಪನೆ ಕುರಿತು ರೈತರು ಸಲಹೆ ನೀಡಿದ್ದಾರೆ. ಈ ಬಗ್ಗೆ ಸಚಿವರು ಹಾಗೂ ಬ್ಯಾಡಗಿ ಮೆಣಸಿನಕಾಯಿ ವರ್ತಕರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಜಿಲ್ಲೆಯ ಗಂಗಾವತಿ ತಾಲೂಕಿನಾದ್ಯಂತ ಆಲಿಕಲ್ಲು ಮಳೆ ಸುರಿದ ಪರಿಣಾಮ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದ್ದು, ತಾಲೂಕಿಗೆ ನಾಳೆ ಭೇಟಿ ಕೊಡುವೆ. ಬೆಳೆ ನಷ್ಟಕ್ಕೆ ಒಳಗಾದ ರೈತರ ಹೊಲಗಳಿಗೆ ತೆರಳಿ ವೀಕ್ಷಣೆ ಮಾಡುತ್ತೇನೆ. ಈಗಾಗಲೇ ನಾನು 9 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿರುವೆ ಎಂದರು.
ಕೃಷಿ ಇಲಾಖೆ ಅಧಿಕಾರಿಗಳಿಗೆ ಬೆಳೆ ನಷ್ಟದ ವರದಿ ಮಾಡುವಂತೆ ಸೂಚನೆ ನೀಡಿದ್ದೇನೆ. ಹಾಪ್ ಕಾಮ್ಸ್ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಹೆಚ್ಚಾಗಿಲ್ಲ. ಕಲಬುರಗಿ, ಬೀದರ್ ಹೊರತುಪಡಿಸಿ ಬೇರೆ ಜಿಲ್ಲೆಗಳಲ್ಲಿ ಇಲ್ಲ. ಹೀಗಾಗಿ, ಲಾಕ್ಡೌನ್ ನೆಪವೊಡ್ಡಿ ಕೃಷಿ ಚಟುವಟಿಕೆಗೆ ಸಂಬಂಧಿಸಿದ ಯಾವುದೇ ವಹಿವಾಟನ್ನು ಸ್ಥಗಿತಗೊಳಿಸಬಾರದು. ಬೆಳಿಗ್ಗೆ 7ರಿಂದ ಸಂಜೆ 7ರವರೆಗೆ ಕೃಷಿ ಚಟುವಟಿಕೆಗೆ ಸಂಬಂಧಿಸಿದ ಮಾರುಕಟ್ಟೆ ತೆರೆದಿಡಬೇಕು. ಕೃಷಿಗೆ ಮಾತ್ರ ಲಾಕ್ಡೌನ್ ಅನ್ವಯಿಸುವುದಿಲ್ಲ ಎಂದರು.