ಬಳ್ಳಾರಿ: ಕೋವಿಡ್-19 ವೈರಸ್ ರಾಜ್ಯದೆಲ್ಲೆಡೆ ಹರಡುತ್ತಿದ್ದು, ವೀರಶೈವ ವಿದ್ಯಾವರ್ಧಕ ಸಂಘದಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 15 ಲಕ್ಷ ರೂ.ಗಳ ದೇಣಿಗೆ ನೀಡಲಾಗಿದೆ.
ರಾಜ್ಯ ಸರ್ಕಾರ ಸೋಂಕು ತಡೆಗಟ್ಟಲು ಯುದ್ಧೋಪಾದಿಯಲ್ಲಿ ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿ ಸರ್ಕಾರದ ಹೋರಾಟಕ್ಕೆ ವೀರಶೈವ ವಿದ್ಯಾವರ್ಧಕ ಸಂಘವು 15 ಲಕ್ಷ ರೂ.ಗಳ ದೇಣಿಗೆಯನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದೆ. ಈ ಮೂಲಕ ಸಂಘವು ಸರ್ಕಾರ ನಡೆಸುತ್ತಿರುವ ಹೋರಾಟಕ್ಕೆ ಕೈಜೋಡಿಸಿದೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಚೋರನೂರು ಕೊಟ್ರಪ್ಪ ನೇತೃತ್ವದಲ್ಲಿ ಸಂಘದ ಮುಖಂಡರು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಮುಖಾಂತರ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 15 ಲಕ್ಷ ರೂ. ಮೊತ್ತದ ಚೆಕ್ ಹಸ್ತಾಂತರಿಸಿದರು.
ಸಂಘದ ಕಾರ್ಯಕಾರಿ ಸಮಿತಿ ಹಾಗೂ ಸದಸ್ಯರು ತೀರ್ಮಾನಿಸಿ ಕೋವಿಡ್-19 ವಿಷಯದಲ್ಲಿ ಸರ್ಕಾರಕ್ಕೆ ನೆರವು ನೀಡಲು ಮುಂದೆ ಬರಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕೈಗೊಳ್ಳುತ್ತಿರುವ ಕ್ರಮಗಳನ್ನು ಸಂಘವು ಹೃತ್ಪೂರ್ವಕವಾಗಿ ಅಭಿನಂದಿಸುತ್ತದೆ ಎಂದು ಸಂಘದ ಕಾರ್ಯದರ್ಶಿ ಚೋರನೂರು ಕೊಟ್ರಪ್ಪ ಹೇಳಿದರು.