ಬಳ್ಳಾರಿ : ಬಾಲ ಕಾರ್ಮಿಕ ಮಕ್ಕಳನ್ನು ಮುಖ್ಯವಾಹಿನಿಗೆ ಕರೆ ತರಲು ಕೇಂದ್ರ ಮತ್ತು ರಾಜ್ಯ ಸರ್ಕಾರ, ಸರ್ಕಾರೇತರ ಸಂಸ್ಥೆಗಳು ಹಾಗೂ ಸಾರ್ವಜನಿಕರು ಸಂಘಟಿತರಾಗಿ ಪ್ರಯತ್ನಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರ್ಜುನ್ ಎಸ್ ಮಲ್ಲೂರ್ ಅವರು ಹೇಳಿದರು. ಜಿಲ್ಲಾಡಳಿತ, ಜಿಪಂ, ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಮತ್ತು ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನೆ ಇವರ ಸಹಯೋಗದೊಂದಿಗೆ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ನಿಮಿತ್ತ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಾಲ್ಯ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಆಟೋ ಮೂಲಕ ಜನಜಾಗೃತಿ ಜಾಥಾಗೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಮಕ್ಕಳು ರಾಷ್ಟ್ರದ ಸಂಪತ್ತು. ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಪದ್ಧತಿಯು ದೈಹಿಕ, ನೈತಿಕ, ಮಾನಸಿಕ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರ ಶಿಕ್ಷಣ ಅವಕಾಶವನ್ನು ತಡೆಗಟ್ಟುತ್ತದೆ. ಕಲಿಯುವ ವಯಸ್ಸಿನಲ್ಲಿ ಮಕ್ಕಳು ಶಿಕ್ಷಣದಿಂದ ದೂರ ಉಳಿದು ದುಡಿಮೆಯಲ್ಲಿ ತೊಡಗಿಕೊಳ್ಳುವುದು ಅತ್ಯಂತ ಕಳವಳಕಾರಿ. ಈ ನಿಟ್ಟಿನಲ್ಲಿ ಬಾಲಕಾರ್ಮಿಕ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಎಲ್ಲರೂ ಶ್ರಮಪಡಬೇಕು ಎಂದರು.
ಅಲ್ಲದೇ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಸಂಪೂರ್ಣ ನಿಷೇಧಿಸಲಾಗಿದೆ. ಹಾಗಿದ್ದರೂ ಮಕ್ಕಳನ್ನು ನಿಯೋಜಿಸಿಕೊಂಡಲ್ಲಿ ಮೊದಲ ಅಪರಾಧಕ್ಕೆ ಮಾಲೀಕರಿಗೆ 6 ತಿಂಗಳಿಂದ 2 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 20 ರಿಂದ 50 ಸಾವಿರ ರೂಪಾಯಿವರೆಗೆ ದಂಡ, ಕೆಲವೊಮ್ಮೆ ಎರಡನ್ನೂ ವಿಧಿಸಲು ಅವಕಾಶವಿರುತ್ತದೆ. ಪುನರಾವರ್ತಿತ ಅಪರಾಧಕ್ಕೆ 1 ರಿಂದ 5 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಹಾಗೂ ತಪ್ಪಿತಸ್ಥ ಮಾಲೀಕರು ತಾವು ನಿಯೋಜಿಸಿಕೊಂಡ ಪ್ರತಿ ಮಗುವಿಗೆ 20 ಸಾವಿರಗಳ ರೂ. ಪರಿಹಾರವನ್ನು ಮಕ್ಕಳ ಪುನರ್ವಸತಿಗೆ ರಚಿಸಲಾದ ಕಲ್ಯಾಣ ನಿಧಿಗೆ ಪಾವತಿಸಬೇಕಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎ ಮಂಜುನಾಥ್, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ವಿಜಯಲಕ್ಷಿ ಮೈದೂರ್, ಕಾರ್ಮಿಕ ಅಧಿಕಾರಿಗಳಾದ ಚಂದ್ರಶೇಖರ ಐಲಿ, ಕಮಲ್ ಅಲ್ತಾಫ್ ಅಹ್ಮದ್, ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಎ ಮೌನೇಶ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಮಂಜುನಾಥ್, ಪಿ ಎಂ ಈಶ್ವರಯ್ಯ ಇದ್ದರು.