ಗದಗ: ಮಲಪ್ರಭಾ ನದಿ ಹಾಗೂ ಬೆಣ್ಣೆಹಳ್ಳ ಪ್ರವಾಹದ ಅಬ್ಬರಕ್ಕೆ ಜಿಲ್ಲೆಯಲ್ಲಿ 158 ಕೋಟಿ ಹಾನಿ ಸಂಭವಿಸಿದೆ ಎಂದು ಕಂದಾಯ ಸಚಿವ ಆರ್.ಅಶೋಕ ತಿಳಿಸಿದ್ದಾರೆ.
ಗದಗ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ಪ್ರವಾಹದಿಂದಾಗಿ ಜಿಲ್ಲೆಯಲ್ಲಿ 158 ಕೋಟಿ ಹಾನಿಯಾಗಿದೆ. ಈಗಾಗಲೇ ಜಿಲ್ಲಾಧಿಕಾರಿಗಳ ಅಕೌಂಟ್ನಲ್ಲಿ 12 ಕೋಟಿ 87 ಲಕ್ಷ ರೂಪಾಯಿ ಇದೆ. ಅದನ್ನು ಬಳಕೆ ಮಾಡಿಕೊಂಡು ಅಭಿವೃದ್ಧಿ ಕೆಲಸ ಮಾಡಬಹುದು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದೆಹಲಿಗೆ ಹೋಗಿದ್ದು, ಹೆಚ್ಚಿನ ಅನುದಾನವನ್ನು ತರಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.
ಇನ್ನು, ಮಲಪ್ರಭಾ ನದಿ ಒತ್ತುವರಿ ಆಗಿರುವುದರಿಂದ ಪ್ರವಾಹ ಸ್ಥಿತಿ ಉಂಟಾಗುತ್ತಿದೆ. ಈಗಾಗಲೇ ಸಿಎಂ ನೇತೃತ್ವದಲ್ಲಿ ಆಲಮಟ್ಟಿಯಲ್ಲಿ ಸಭೆ ನಡೆಸಲಾಗಿದೆ. ಆದಷ್ಟು ಬೇಗ ಸರ್ವೇ ಕಾರ್ಯ ನಡೆಸಿ ಒತ್ತುವರಿ ತೆರವು ಮಾಡಲಾಗುವುದು. ಜೊತೆಗೆ ಪ್ರವಾಹಕ್ಕೆ ತುತ್ತಾಗಿರುವ ಪ್ರದೇಶಗಳಿಗೆ ಶಾಶ್ವತ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.