ಬಸವಕಲ್ಯಾಣ: ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರಿಗೆ ಉತ್ತಮ ಚಿಕಿತ್ಸೆ ನೀಡುವಲ್ಲಿ ಕಾಳಜಿ ವಹಿಸಬೇಕು. ಸರ್ಕಾರಿ ಆಸ್ಪತ್ರೆಗೆ ಬರುವ ಬಾಣಂತಿಯರನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ: ವಿ.ಜಿ.ರೆಡ್ಡಿ ಎಚ್ಚರಿಸಿದ್ದಾರೆ.
ಹೆರಿಗೆ ಆಸ್ಪತ್ರೆಯಲ್ಲಿ ಮಹಿಳೆಯರಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ಹೆರಿಗೆಗೆ ಹಣ ವಸೂಲಿ ಮಾಡಲಾಗುತ್ತಿದೆ ಎನ್ನುವ ಆರೋಪದ ಹಿನ್ನೆಲೆ ನಗರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಯಲ್ಲಿಯ ವ್ಯವಸ್ಥೆ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುವುದು. ವೈದ್ಯರು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಹೆರಿಗೆ ನಂತರ ನರ್ಸ್ಗಳು ಬಾಣಂತಿಯರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎನ್ನುವ ದೂರುಗಳು ಕೇಳಿ ಬಂದಿವೆ. ತನಿಖೆ ನಂತರ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಆಸ್ಪತ್ರೆಯಲ್ಲಿ ಮಹಿಳಾ ವೈದ್ಯರು ದಿನದ 24 ಗಂಟೆಗಳ ಕಾಲ ಲಭ್ಯವಿರಬೇಕು. ಆಸ್ಪತ್ರೆಗೆ ಬರುವ ಮಹಿಳೆಯರಿಗೆ ರಕ್ತ ತಪಾಸಣೆ, ಸ್ಕ್ಯಾನಿಂಗ್ ಸೇರಿದಂತೆ ಯಾವುದೇ ತಪಾಸಣೆಗೆಂದು ಖಾಸಗಿ ಆಸ್ಪತ್ರೆಗೆ ಕಳುಹಿದೆ ಸರ್ಕಾರಿ ಆಸ್ಪತ್ರೆಯಲ್ಲಿಯೇ ಎಲ್ಲ ತರಹದ ತಪಾಸಣೆ ನಡೆಸಬೇಕು ಎಂದು ಸಿಎಂಒ ಡಾ: ಅಪರ್ಣಾ ಮಹಾನಂದ್ಗೆ ಸೂಚಿಸಿದ್ದಾರೆ.