ಬೀದರ್: ಸಿಂಧುತ್ವ ಪ್ರಮಾಣಪತ್ರ ಸಿಗದ ಹಿನ್ನೆಲೆಯಲ್ಲಿ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಕುಮಾರ್ ಚಿಂಚೋಳಿ ಗ್ರಾಮದ ಕೆಎಸ್ಆರ್ಟಿಸಿ ಬಸ್ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಓಂಕಾರ ಶೇರಿಕಾರ್ ಆತ್ಮಹತ್ಯೆ ಮಾಡಿಕೊಂಡವರು. ವಿಷಯ ತಿಳಿಯುತ್ತಿದ್ದಂತೆ ಸಂಬಂಧಿಕರು ಹಾಗೂ ಸಮಾಜದ ಪ್ರಮುಖರು ಹುಮ್ನಾಬಾದ್ ಪಟ್ಟಣದ ಅಂಬೇಡ್ಕರ್ ವೃತ್ತದ ಎದುರು ಶವವಿಟ್ಟು ಧರಣಿ ನಡೆಸಿದರು.
ಗೊಂಡ ಕುರುಬ ಸಮಾಜಕ್ಕೆ ಜಾತಿ ಪ್ರಮಾಣಪತ್ರ ವಿತರಿಸಿ ಸಿಂಧುತ್ವ ಪ್ರಮಾಣಪತ್ರ ಕಲ್ಪಿಸುತ್ತೇನೆ ಎಂದು ಸಚಿವ ಬಿ. ಶ್ರೀರಾಮುಲು ಅವರು ಈ ಹಿಂದೆ ಭರವಸೆ ನೀಡಿದ್ದರು. ಆದರೆ, ಇದುವರೆಗೂ ಅವರು ನೀಡಿದ ಭರವಸೆ ಈಡೇರಿಲ್ಲ. ಸಿಂಧುತ್ವ ಪ್ರಮಾಣಪತ್ರ ಸಿಗದ ಹಿನ್ನೆಲೆಯಲ್ಲಿ ಸಮಾಜದ ನೌಕರರು ತೀವ್ರ ಸಮಸ್ಯೆ ಎದುರಿಸಿ ನೌಕರಿ ಕಳೆದುಕೊಳ್ಳುವಂತಾಗಿದೆ. ಹೀಗಾಗಿ, ಕೂಡಲೇ ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರು ಸ್ಥಳಕ್ಕೆ ಭೇಟಿ ನೀಡಿ ಪ್ರಮಾಣಪತ್ರ ವಿತರಿಸುವ ಬಗ್ಗೆ ಭರವಸೆ ನೀಡುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಸಂಬಂಧಿಕರು ಪಟ್ಟು ಹಿಡಿದಿದ್ದಾರೆ. ಈ ವೇಳೆ ಮೃತನ ಸಂಬಂಧಿಕರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು.
ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಹುಮ್ನಾಬಾದ್ ಶಾಸಕ ರಾಜಶೇಖರ ಪಾಟೀಲ್ ಅವರು, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಹಾಗೂ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ವೇಳೆ ಶಾಸಕರು ವೈಯಕ್ತಿಕವಾಗಿ ಒಂದು ಲಕ್ಷ ರೂಪಾಯಿ ನೀಡುವುದಾಗಿ ಹೇಳಿದ್ದಾರೆ. ಅದೇ ರೀತಿಯಾಗಿ ಈ ಸಿಂಧುತ್ವ ಪ್ರಮಾಣ ಪತ್ರದ ಬಗ್ಗೆ ಅಧಿವೇಶನದಲ್ಲಿ ಶೂನ್ಯ ವೇಳೆಯಲ್ಲಿ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಅವರು ಭರವಸೆ ನೀಡಿದ್ದಾರೆ.