ಬೀದರ್: ಬಿತ್ತನೆ ಗುರಿ, ನೆರೆ ಮುಂಜಾಗ್ರತಾ ಕ್ರಮಗಳು ಹಾಗೂ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬೀದರ್ ಜಿಲ್ಲಾಡಳಿತದೊಂದಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಂಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಿತು.
ಜಿಲ್ಲೆಯಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿದ್ದು, ಸಾವಿನ ಸಂಖ್ಯೆ ಸಹ ಹೆಚ್ಚಾಗ್ತಿದೆ. ಈ ನಿಟ್ಟಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ. ಗಂಟಲು ದ್ರವ ಮಾದರಿ ಪರೀಕ್ಷೆ ಬೀದರ್ನಲ್ಲೇ ಆಗುತ್ತಿದೆ. ಮಹಾರಾಷ್ಟ್ರದಿಂದ ವಾಪಸ್ ಬಂದವರಿಂದ ಜಿಲ್ಲೆಯಲ್ಲಿ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದು, ನಿಯಂತ್ರಣ ಮಾಡುವುದು ಕಷ್ಟವಾಗುತ್ತಿದೆ. ಜನರು ಲಾಕ್‌ಡೌನ್ ಜಾರಿಗೊಳಿಸುವಂತೆ ಸಲಹೆ ನೀಡುತ್ತಿದ್ದಾರೆ ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ ಎನ್ನಲಾಗಿದೆ.
ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಸೋಯಾಬಿನ್ ಬೀಜ ಮೊಳಕೆ ಒಡೆದಿಲ್ಲ. ಇದರಿಂದ ಸಾಕಷ್ಟು ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಅತಿಯಾಗಿ ಮಳೆಯಾದ್ರೆ ಜಿಲ್ಲೆಯ ಮಾಂಜ್ರಾ ನದಿ ತಟದ 23 ಗ್ರಾಮಗಳಲ್ಲಿ ನೆರೆ ಬರುವ ಸಾಧ್ಯತೆಗಳಿದ್ದು, ಆ ಭಾಗದಲ್ಲಿ ಅಗತ್ಯವಾದ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಅಧಿಕಾರಿಗಳು ಸಿಎಂಗೆ ಹೇಳಿದ್ದಾರೆ.