ಬೀದರ್: ಬಸವಕಲ್ಯಾಣ ವಿಧಾಸಭಾ ಕ್ಷೇತ್ರದ ಉಪಚುನಾವಣೆಗೆ ದಿನಗಣನೆ ಶುರುವಾದ ಹಿನ್ನೆಲೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳ ನಾಯಕರ ದಂಡು ಕ್ಷೇತ್ರದಲ್ಲಿ ಬೀಡು ಬಿಟ್ಟಿದ್ದು, ತಮ್ಮ ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರದಲ್ಲಿ ತೊಡಗಿವೆ.
ಇಂದು ಬಿಜೆಪಿ ಅಭ್ಯರ್ಥಿ ಶರಣು ಸಲಗಾರ್ ಪರ ಮತಯಾಚನೆಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಚಿವರಾದ ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ಆನಂದ್ ಸಿಂಗ್, ಬಸವರಾಜ ಬೊಮ್ಮಾಯಿ, ಆರ್.ಅಶೋಕ್, ಪ್ರಭು ಚವ್ಹಾಣ್, ವಿ.ಸೋಮಣ್ಣ, ಲಕ್ಷ್ಮಣ ಸವದಿ ಸೇರಿದಂತೆ ಘಟಾನುಘಟಿ ನಾಯಕರು ಆಗಮಿಸಿದ್ದರು.
ನಗರದ ಖಾಸಗಿ ಪಂಕ್ಷನ್ ಹಾಲ್ನಲ್ಲಿ ಬಿಜೆಪಿ ಆಯೋಜಿಸದ್ದ ಸಮಾವೇಶದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಮಾತನಾಡಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಇದೇ ವೇಳೆ 2018ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದ್ದಕ್ಕೆ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದ ಭಾಲ್ಕಿಯ ಪ್ರಕಾಶ ಖಂಡ್ರೆ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಮತ್ತೆ ಬಿಜೆಪಿ ಸೇರ್ಪಡೆಯಾದರು.
ಓದಿ : ದಾಡಿ ಬಿಟ್ಟವರೆಲ್ಲ ರವೀಂದ್ರನಾಥ್ ಟ್ಯಾಗೋರ್ ಆಗಲ್ಲ : ಮೋದಿ ಕಾಲೆಳೆದ ಮಲ್ಲಿಕಾರ್ಜುನ್ ಖರ್ಗೆ
ನಗರದ ಅಕ್ಕಮಹಾದೇವಿ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ರಾಜ್ಯ ಚುನಾವಣಾ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಲಾ ಬಿ. ನಾರಾಯಣರಾವ್ ಪರ ಪ್ರಚಾರ ಸಭೆ ನಡೆಯಿತು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಬಿಜೆಪಿ, ಸಿಎಂ ಬಿಎಸ್ವೈ ವಿರುದ್ಧ ವಾಗ್ದಾಳಿ ನಡೆಸಿದರು. ಇದೇ ವೇಳೆ ಕಾಂಗ್ರೆಸ್ ಅಭ್ಯರ್ಥಿ ಮಾಲಾ ಬಿ. ನಾರಾಯಣರಾವ್ ತಮ್ಮ ಪತಿಯನ್ನು ನೆನೆದು ಕಣ್ಣೀರು ಹಾಕಿದರು.