ಬಸವಕಲ್ಯಾಣ : ಕೊರೊನಾ ಸೋಂಕಿತರಿಗೆ ಇನ್ನು ಮುಂದೆ ತಾಲೂಕು ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲು ನಿರ್ಧರಿಸಲಾಗಿದೆ. ಚಿಕಿತ್ಸೆಗೆ ಅಗತ್ಯವಿರುವ ಎಲ್ಲಾ ರೀತಿಯ ಸಿದ್ಧತೆಗಳನ್ನು ನಾಳೆಯಿಂದಲೇ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್.ಸೂಚಿಸಿದರು.
ನಗರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್-19 ಆಸ್ಪತ್ರೆ ಆರಂಭಿಸುವ ಕುರಿತು ಮಾಡಿಕೊಳ್ಳಲಾದ ವ್ಯವಸ್ಥೆ ಪರಿಶೀಲಿಸಿದ ಅವರು, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾರಣ ತಾಲೂಕು ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲು ನಿರ್ಧರಿಸಲಾಗಿದೆ. ಆದಷ್ಟು ಬೇಗ ಇಲ್ಲಿ ಕೋವಿಡ್-19 ಆಸ್ಪತ್ರೆ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸೋಂಕಿತರಿಗೆ ಚಿಕಿತ್ಸೆ ನೀಡುವ ಕುರಿತು ಆಸ್ಪತ್ರೆಯ ಮೊದಲನೇ ಮಹಡಿಯಲ್ಲಿ ಸಿದ್ಧಗೊಳಿಸಲಾದ ಐಸೋಲೇಷನ್ ವಾರ್ಡ್ಗಳಿಗೆ ಭೇಟಿ ನೀಡಿದ ಅವರು, ಕನಿಷ್ಠ 70 ಸೋಂಕಿತರಿಗೆ ಚಿಕಿತ್ಸೆ ನೀಡುವ ಸಾಮರ್ಥ್ಯದ ಬೆಡ್‌ಗಳನ್ನು ಸಿದ್ಧಪಡಿಸಬೇಕು. ಸೋಂಕಿತರ ಆಗಮನ ಮತ್ತು ನಿರ್ಗಮನಕ್ಕಾಗಿ ಪ್ರತ್ಯೇಕ ದ್ವಾರದ ವ್ಯವಸ್ಥೆ ಮಾಡಬೇಕು. ಸಾಮಾನ್ಯ ರೋಗಿಗಳೊಂದಿಗೆ ಸೋಂಕಿತರ ಸಂಪರ್ಕ ಆಗದಂತೆ ನೋಡಿಕೊಳ್ಳಬೇಕು ಎಂದು ಸ್ಥಳದಲ್ಲಿದ್ದ ವೈದ್ಯರಿಗೆ ತಿಳಿಸಿದರು.
ಆಸ್ಪತ್ರೆಯಲ್ಲಿ ಸೋಂಕಿತರಿಗೆ ವೆಂಟಿಲೇಟರ್ ಸೌಲಭ್ಯ ಕಲ್ಪಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಶೌಚಾಲಯ, ಸ್ನಾನದ ಕೋಣೆಗಳನ್ನು ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು. ವೈದ್ಯರು ಮತ್ತು ಸಿಬ್ಬಂದಿಗೆ ವಿಶ್ರಾಂತಿಗಾಗಿ ಪ್ರತ್ಯೇಕ ಕೋಣೆ ವ್ಯವಸ್ಥೆ ಮಾಡಬೇಕು. ಪ್ರತಿ ವಾರ್ಡ್ಗಳು ಸೇರಿ ಆವರಣದಲ್ಲಿಯೂ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಆಸ್ಪತ್ರೆ ಸಿಎಂಒ ಡಾ. ಅಪರ್ಣಾ ಮಹಾನಂದ್ ಅವರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಕೋವಿಡ್ ಸೋಂಕಿತರ ಚಿಕಿತ್ಸೆಗೆ ಬೇಕಾಗುವ ವೈದ್ಯರು, ಅಗತ್ಯ ಸಿಬ್ಬಂದಿ ಹಾಗೂ ಸಲಕರಣೆಗಳ ಕುರಿತು ವರದಿ ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸಬೇಕು. ಸೋಂಕಿತರಿಗೆ ಅತ್ಯುತ್ತಮ ಚಿಕಿತ್ಸೆ ನೀಡುವ ಜೊತೆಗೆ ಸೋಂಕಿಗೊಳಗಾದ ಒಬ್ಬ ವ್ಯಕ್ತಿಯೂ ಮರಣ ಹೊಂದದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಈಗಾಗಲೇ 4 ವಾರ್ಡ್ಗಳಲ್ಲಿ 44 ಬೆಡ್ ಸಿದ್ಧಪಡಿಸಲಾಗಿದೆ. ಉಳಿದ ಬೆಡ್‌ಗಳನ್ನು ಆದಷ್ಟು ಬೇಗನೇ ಸಿದ್ಧಮಾಡಿಕೊಳ್ಳಲಾಗುವುದು ಎಂದು ಡಾ. ಅಪರ್ಣಾ ಮಹಾನಂದ ಮಾಹಿತಿ ನೀಡಿದರು.