ಬೀದರ್: ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಔರಾದ್ ತಾಲೂಕಿನ ಕೆಲವು ಗ್ರಾಮಗಳಲ್ಲಿ ಮಳೆ ಅವಾಂತರ ಸೃಷ್ಟಿಸಿದೆ.
ಜಿಲ್ಲೆಯ ಔರಾದ್ ತಾಲೂಕಿನ ಜಂಬಗಿ, ಕಂದಗೂಳ, ವಡಗಾಂವ್, ಕಾರವಾರ ತಾಂಡ ಭಾಗದಲ್ಲಿ ಸತತ ನಾಲ್ಕು ಗಂಟೆಗಳ ಕಾಲ ಸುರಿದ ಮಳೆಯಿಂದಾಗಿ ನೀರು ಮನೆಗಳಿಗೆ ನುಗ್ಗಿ ಅಪಾರ ಹಾನಿಯುಂಟು ಮಾಡಿದೆ.
ಜಂಬಗಿ ಗ್ರಾಮದ ತೆಲಂಗಾಣ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಮೇಲಿಂದ ನೀರು ಹರಿದು ಕೆಲಕಾಲ ಸಂಚಾರ ಸಂಪೂರ್ಣ ಸ್ತಬ್ದವಾಗಿತ್ತು. ಅಲ್ಲದೇ ರೈತರು ಬೆಳೆದ ಸೋಯಾಬಿನ್, ತೊಗರಿ, ಹೆಸರು, ಉದ್ದು, ಜೋಳ ಮಳೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದು, ಅನ್ನದಾತರು ಕಂಗಾಲಾಗಿದ್ದಾರೆ.