ಬಸವಕಲ್ಯಾಣ: ಹಥ್ರಾಸ್‌ನಲ್ಲಿ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪಿಗಳನ್ನು ತಕ್ಷಣ ಗಲ್ಲಿಗೇರಿಸುವಂತೆ ಒತ್ತಾಯಿಸಿ ಭೀಮ ಆರ್ಮಿ ಹಾಗೂ ಶ್ರೀರಾಮ ಸೇನೆ ಸಂಘಟನೆಗಳು ಒತ್ತಾಯಿಸಿವೆ.
ಈ ಸಂಬಂಧ ಬಸವಕಲ್ಯಾಣ ಮಿನಿ ವಿಧಾನ ಸೌಧಕ್ಕೆ ತೆರಳಿದ ಸಂಘಟನೆ ಪದಾಧಿಕಾರಿಗಳು ಹಾಗೂ ಪ್ರಮುಖರ ನಿಯೋಗ, ತಹಶೀಲ್ದಾರ್ ಸಾವಿತ್ರಿ ಸಲಗರ್ ಮೂಲಕ ಉತ್ತರಪ್ರದೇಶ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಉತ್ತರಪ್ರದೇಶದ ಹಥ್ರಾಸ್‌ನಲ್ಲಿ ನಾಲ್ಕು ಮೇಲ್ಜಾತಿಯ ಯುವಕರು 19 ವರ್ಷದ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದಲ್ಲದೇ, ಆಕೆಯ ನಾಲಿಗೆ ಕತ್ತರಿಸುವ ಮೂಲಕ ವಿಕೃತ ಮೆರೆದಿದ್ದಾರೆ. ಇದರಿಂದ ಇಡೀ ಮಾನವ ಕುಲ ತಲೆ ತಗ್ಗಿಸುವಂತಾಗಿ ಎಂದು ಕಳವ್ಯಕ್ತಪಡಿಸಿದರು.
ಇತ್ತೀಚಿನ ದಿನಗಳಲ್ಲಿ ದಲಿತ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡುವ ಮೂಲಕ ದೇಶದ ಯಾವುದೇ ಮೂಲೆಯಲ್ಲೂ ಅತ್ಯಾಚಾರ ಪ್ರಕರಣಗಳನ್ನು ನಡೆಯದಂತೆ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.