ಬೀದರ್: ಕೋವಿಡ್-19 ಸಂದರ್ಭದಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ನಾಲ್ಕು ಕಾಯ್ದೆಗಳಿಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ಜೆಡಿಎಸ್ ಮುಖಂಡ ಬಂಡೆಪ್ಪ ಕಾಶೆಂಪೂರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಜೆಡಿಎಸ್ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರ ತಂದಿರುವ 1961 ರ ಕರ್ನಾಟಕ ಭೂ ಸುಧಾರಣೆ ಕಾಯ್ದೆ, 1966 ರ ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆ, 1947 ರ ಕೈಗಾರಿಕಾ ವ್ಯಾಜ್ಯ ಕಾಯ್ದೆ, 1947 ರ ಕಾರ್ಖಾನೆ ಕಾಯ್ದೆಗಳ ವಿರುದ್ಧ ಮುಂದಿನ ಅಧಿವೇಶನದಲ್ಲಿ ಧ್ವನಿ ಎತ್ತುತ್ತೇವೆ ಎಂದು ಬಂಡೆಪ್ಪ ಕಾಶೆಂಪೂರ್ ಹೇಳಿದರು.
ಸರ್ಕಾರ ಈ ಕೂಡಲೇ ರೈತ ವಿರೋಧಿ ಸುಗ್ರೀವಾಜ್ಞೆ ಹಿಂಪಡೆಯಬೇಕು. ಇಲ್ಲದಿದ್ದರೆ ಮುಂದಿನ ಅಧಿವೇಶನದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕಾಶೆಂಪೂರ್ ಎಚ್ಚರಿಕೆ ನೀಡಿದರು.