ಬಸವಕಲ್ಯಾಣ: ಮಾರಕ ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟುವಲ್ಲಿ ಸಾರ್ವಜನಿಕರ ಪಾತ್ರ ಮಹತ್ವದ್ದಾಗಿದ್ದು, ಇದಕ್ಕೆ ಲಾಕ್‌ಡೌನ್, ಸೀಲ್‌ಡೌನ್ ಪರಿಹಾರವಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಹೇಳಿದರು.
ನಗರದ ಬಿಕೆಡಿಬಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೊರೊನಾ ಸೋಂಕು ಹರಡದಂತೆ ಸರ್ಕಾರದಿಂದ ರೂಪಿಸಲಾದ ನಿಯಮಗಳನ್ನು ಜನರು ಕಟ್ಟುನಿಟ್ಟಿನಿಂದ ಪಾಲಿಸುವ ಮೂಲಕ ಕೊರೊನಾ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಜನನಿಬಿಡ ಪ್ರದೇಶದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದ ಸಚಿವರು, ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಕೊಳ್ಳುವ ಜೊತೆಗೆ ಸ್ವಯಂ ಕ್ವಾರಂಟೈನ್‌ಗೆ ಒಳಪಡಬೇಕು. ಮನೆಯವರು ಸೇರಿದಂತೆ ಇತರ ಯಾರೊಂದಿಗೂ ಸಂಪರ್ಕಕ್ಕೆ ಬರದಂತೆ ಮುಂಜಾಗೃತೆ ವಹಿಸಬೇಕು ಎಂದು ಸಲಹೆ ನೀಡಿದರು. ಕೊರೊನಾ ಹರಡುವಿಕೆ ನಿಯಂತ್ರಿಸುವಲ್ಲಿ ಆರೋಗ್ಯ ಸೇತು ಆ್ಯಪ್ ಪಾತ್ರ ಪ್ರಮುಖವಾಗಿದೆ. ಪ್ರತಿಯೊಬ್ಬರು ಆ್ಯಪ್ ಬಳಸುವಂತೆ ಜನ ಜಾಗೃತಿ ಮೂಡಿಸಬೇಕು ಎಂದು ಮನವಿ ಮಾಡಿದರು.
ಇನ್ನು ಇಲ್ಲಿಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವರು, ಆಸ್ಪತ್ರೆಯಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು. ಆಸ್ಪತ್ರೆಗೆ ಬರುವ ಜನರಿಗೆ ನಿರ್ಲಕ್ಷ್ಯ ವಹಿಸದೇ ಸೂಕ್ತ ಚಿಕಿತ್ಸೆ ನೀಡಬೇಕು ಎಂದರು. ಹಾಗೆಯೇ ಆಸ್ಪತ್ರೆ ವಾರ್ಡ್ ಸೇರಿದಂತೆ ಆಸ್ಪತ್ರೆಯಲ್ಲಿನ ಆವರಣದಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದು ಸ್ಥಳದಲಿದ್ದ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಈ ಸಂದರ್ಭದಲ್ಲಿ ಶಾಸಕ ಬಿ.ನಾರಾಯಣರಾವವ್, ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಎಸ್ಪಿ ಡಿ.ಎಲ್.ನಾಗೇಶ, ಜಿಪಂ ಸಿಇಒ ಜ್ಞಾನೇಂದ್ರಕುಮಾರ ಸೇರಿದಂತೆ ಅಧಿಕಾರಿಗಳು, ಜನ ಪ್ರತಿನಿಧಿಗಳು ಹಾಜರಿದ್ದರು.