ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಹಾಗೂ ಮುರಾಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳಿಬ್ಬರು ಅನಾರೋಗ್ಯದಿಂದ ಮೃತಪಟ್ಟ ಹಿನ್ನೆಲೆ ವಸತಿ ಶಾಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಭೇಟಿ ನೀಡಿ ವಸತಿ ಶಾಲೆಗಳ ಸ್ಥಿತಿಗತಿ ಪರಿಶೀಲಿಸಿದರು.
ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಒಟ್ಟು 220 ವಿದ್ಯಾರ್ಥಿನಿಯರು ವಾಸವಿದ್ದು, ಇದುವರೆಗೂ ಸರ್ಕಾರಿ ಕಟ್ಟಡ ಭಾಗ್ಯ ದೊರಕಿಲ್ಲ. ಖಾಸಗಿ ಕಟ್ಟಡದಲ್ಲಿ ನಡೆಯುತ್ತಿರುವ ವಸತಿ ಶಾಲೆಗೆಯಲ್ಲಿ ಸಮರ್ಪಕ ಕೋಣೆಗಳಿಲ್ಲ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ಸಿಸಿ ಕ್ಯಾಮರಾ ವ್ಯವಸ್ಥೆ ಇಲ್ಲ. ಶಾಲೆ ಸುತ್ತಲು ಕಾಂಪೌಂಡ್ ವ್ಯವಸ್ಥೆಯೂ ಇಲ್ಲದ ಕಾರಣ ವಿದ್ಯಾರ್ಥಿಗಳು ಸಾಕಷ್ಟು ಸಮಸ್ಯೆ ಎದುರಿಸುವಂತಾಗಿದೆ. ಮಹಿಳಾ ವಸತಿ ನಿಲಯವಿದ್ದರೂ ಮಹಿಳಾ ಮೇಲ್ವಿಚಾರಕಿ ಇಲ್ಲ ಎಂದು ಎಂದು ಸ್ಥಳದಲ್ಲಿದ್ದ ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ರೇವಣಸಿದ್ಧ ಜಾಡರ ಸಚಿವರ ಗಮನಕ್ಕೆ ತಂದರು.
ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಸಿಬ್ಬಂದಿ ನಿರ್ಲಕ್ಷ್ಯದಿಂದ ಮೃತಪಟ್ಟ ವಿದ್ಯಾರ್ಥಿನಿ ಸಾಧನಾ ಹಾಗೂ ವಿದ್ಯಾರ್ಥಿ ಸಾಯಿ ಕುಮಾರ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸಬೇಕು, ನಿರ್ಲಕ್ಷ್ಯ ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.ನ.7 ರಂದು ಮೃತಪಟ್ಟ ವಿದ್ಯಾರ್ಥಿನಿ ಸಾಧನಾ ಶಂಕರ ಅವರ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ಸರ್ಕಾರದಿಂದ 2.5 ಲಕ್ಷ ರೂ. ಪರಿಹಾರ ಧನ ಕಲ್ಪಿಸಲಾಗುವುದು ಜೊತೆಗೆ ಕುಟುಂಬದವರಿಗೆ ಅಗತ್ಯವಿರುವ ಸಹಾಯ, ಸೌಲಭ್ಯ ಸರ್ಕಾರ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತದೆ ಎಂದು ಭರವಸೆ ನೀಡಿದರು.