ಬೀದರ್: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಕ್ಕಾಗಿ ಸಭೆ ಮಾಡಲು ಅನುಮತಿ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್, ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.
ಬೀದರ್ ನಗರಸಭೆ ಹಾಗೂ ಬಸವಕಲ್ಯಾಣ ಉಪ ಚುನಾವಣೆ ನಿಮಿತ್ತ ಜಾರಿಯಲ್ಲಿರುವ ನೀತಿ ಸಂಹಿತೆಯಿಂದಾಗಿ ಜಿಲ್ಲೆಯಲ್ಲಿ ಕೊರೊನಾ ಸಂಬಂಧಿತ ಸಭೆ ನಡೆಸಲು ಸಾಧ್ಯವಾಗುತ್ತಿಲ್ಲ. ಜಿಲ್ಲೆಯಲ್ಲಿನ ಸರ್ಕಾರಿ ಕೋವಿಡ್ ಆಸ್ಪತ್ರೆಗಳಲ್ಲಿನ ಸ್ಥಿತಿಗತಿ ಅವಲೋಕಿಸಲು, ಜನರ ನೋವಿಗೆ ಸ್ಪಂದಿಸಲು ತುರ್ತಾಗಿ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿನ ಜನಪ್ರತಿನಿಧಿಗಳು ಅಧಿಕಾರಿಗಳ ಸಭೆ ನಡೆಸುವುದು ಅಗತ್ಯವಿದೆ ಎಂದು ಉಲ್ಲೇಖಿಸಿದ್ದಾರೆ.
ಕೊರೊನಾ ಎರಡನೇ ಅಲೆಯ ಅಬ್ಬರ ನಿಯಂತ್ರಣಕ್ಕೆ ತರಲು ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಸಭೆ ನಡೆಸಲು ತ್ವರಿತವಾದ ಅನುಮತಿ ನೀಡಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.