ಬೀದರ್: ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೀದರ್ ದಕ್ಷಿಣ ವಿಧಾನಸಭೆ ಕ್ಷೇತ್ರದಲ್ಲಿ ರೈತರ ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಕುರಿತು ಶಾಸಕ ಬಂಡೆಪ್ಪ ಖಾಶೆಂಪೂರ್ ಪರಿಶೀಲನೆ ನಡೆಸಿದರು.
ಜಿಲ್ಲೆಯ ಅನೇಕ ಕಡೆಗಳಲ್ಲಿ ಕಬ್ಬು, ಶುಂಠಿ, ಹೆಸರು, ತೊಗರಿ, ಉದ್ದು, ಸೋಯಾಬೀನ್ ಸೇರಿದಂತೆ ವಿವಿಧ ಬೆಳೆಗಳು ಹಾಳಾಗಿವೆ. ಕೃಷಿ ಅಧಿಕಾರಿಗಳೊಂದಿಗೆ ಶಾಸಕರು ಬೆಳೆ ಹಾನಿ ಸಂಭವಿಸಿದ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಬೀದರ್ ತಾಲೂಕಿನ ಬಗದಲ ರೈತ ಸಂಪರ್ಕ ಕೇಂದ್ರ ವ್ಯಾಪ್ತಿಯ ಕಾಡವಾದ ಗ್ರಾಮದ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ ಬಂಡೆಪ್ಪ ಖಾಶೆಂಪುರ್ ಅವರು, ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಒಣ ಬೇಸಾಯದಲ್ಲಿ ಬೆಳೆಯಲಾಗಿದ್ದ ಉದ್ದು, ಹೆಸರು, ತೊಗರಿ, ಸೋಯಾಬೀನ್ ಸೇರಿದಂತೆ ಅನೇಕ ಬೆಳೆಗಳು ಸಂಪೂರ್ಣ ಹಾಳಾಗಿವೆ. ಸರ್ಕಾರ ಬೆಳೆ ನಷ್ಟಕ್ಕೆ ಸಿಲುಕಿದ ರೈತರಿಗೆ ಎಕರೆಗೆ ಕನಿಷ್ಠ 25 ಸಾವಿರ ರೂ. ಪರಿಹಾರ ನೀಡಬೇಕು ಎಂದು ಅವರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಬೀದರ್ ಜಿಲ್ಲೆಯಲ್ಲಿ ಹೆಸರು 20,546 ಹೆಕ್ಟೇರ್, ಉದ್ದು 12,766 ಹೆಕ್ಟೇರ್, ತೊಗರಿ 20,844 ಹೆಕ್ಟೇರ್, ಸೋಯಾಬೀನ್ 38,379 ಹೆಕ್ಟೇರ್, ಇತರೆ 8,268 ಸೇರಿದಂತೆ ಒಟ್ಟು 1,00,803 ಹೆಕ್ಟೇರ್ ಬೆಳೆ ಹಾನಿಯಾಗಿದೆ. ಅಧಿವೇಶನದಲ್ಲಿ ಕೂಡ ಬೆಳೆ ಹಾನಿಯ ಬಗ್ಗೆ ಚರ್ಚಿಸುತ್ತೇನೆ. ಸಂಕಷ್ಟಕ್ಕೆ ಸಿಲುಕಿದ ರೈತರಿಗೆ ಪರಿಹಾರ ನೀಡುವ ಕೆಲಸವನ್ನು ಸರ್ಕಾರ ಮಾಡಬೇಕಾಗಿದೆ. ಆದಷ್ಟು ಬೇಗ ಸಮೀಕ್ಷೆ ನಡೆಸಿ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಸರ್ಕಾರ ಪರಿಹಾರ ಒದಗಿಸಬೇಕು ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ಹೇಳಿದ್ದಾರೆ.