ಬಸವಕಲ್ಯಾಣ: ಕ್ಷೇತ್ರದ ಅಭಿವೃದ್ಧಿ ಮತ್ತು ಸರ್ಕಾರದ ಯೋಜನೆಯ ಪರಿಣಾಮಕಾರಿ ಅನುಷ್ಠಾನದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಪಾತ್ರ ಮಹತ್ವದ್ದಾಗಿದ್ದು, ಇಬ್ಬರು ಕೂಡಿ ಶ್ರಮಿಸಿದಾಗ ಮಾತ್ರ ಅಭಿವೃದ್ಧಿ ಕಾಣಲು ಸಾಧ್ಯವೆಂದು ಶಾಸಕ ಬಿ. ನಾರಾಯಣರಾವ್ ಹೇಳಿದರು.
ಇಲ್ಲಿಯ ತಾ.ಪಂ. ಸಭಾಂಗಣದಲ್ಲಿ ವರ್ಗಾವಣೆಗೊಂಡಿರುವ ಕಾರ್ಯನಿರ್ವಾಹಕ ಅಧಿಕಾರಿ ಮಡೋಳಪ್ಪ ಪಿ ಎಸ್ ಅವರಿಗೆ ಬೀಳ್ಕೊಡುಗೆ ಮತ್ತು ಹೊಸದಾಗಿ ಅಧಿಕಾರ ವಹಿಸಿಕೊಂಡಿರುವ ಕಾರ್ಯನಿರ್ವಾಹಕ ಅಧಿಕಾರಿ ಬೀರೇಂದ್ರಸಿಂಗ್ ಠಾಕೂರ ಅವರ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಕಾರ್ಯಗಳಿಗೆ ಅಧಿಕಾರಿ ಮತ್ತು ಜನಪ್ರತಿನಿಧಿಗಳ ನಡುವೆ ಸಮನ್ವಯತೆ ಅವಶ್ಯಕ ಎಂದರು.
ಇಲ್ಲಿ ಇಒ ಅಗಿದ್ದ ಮಡೋಳಪ್ಪ ಅವರು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಈಗ ಹೊಸದಾಗಿ ವರ್ಗವಾಗಿ ಬಂದಿರುವ ಬೀರೇಂದ್ರಸಿಂಗ್ ಅವರು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮನ್ವತೆಯಿಂದ ಕಾರ್ಯನಿರ್ವಹಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸನ್ಮಾನ ಸ್ವೀಕರಿಸಿದ ಮಡೋಳಪ್ಪ ಪಿ ಎಸ್ ಮಾತನಾಡಿ, ಜನಪ್ರತಿನಿಧಿಗಳ ಸಹಕಾರದಿಂದ ಕಳೆದ ಇಲ್ಲಿ 10 ತಿಂಗಳ ಅವಧಿಯಲ್ಲಿ ಸಲ್ಲಿಸಿದ ಸೇವೆ ತೃಪ್ತಿ ತಂದಿದೆ. ಯಾವುದೇ ಸಮಸ್ಯೆ ಎದುರಾಗದಂತೆ ಶಾಸಕರು ಸಹಕರಿಸಿದ್ದಾರೆ. ಎಲ್ಲರ ಸಹಕಾರದಿಂದ ಉತ್ತಮವಾಗಿ ಕಾರ್ಯನರ್ವಹಿಸಲು ಸಾಧ್ಯವಾಗಿದೆ ಎಂದು ತಿಳಿಸಿದರು.