ಬೀದರ್: ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥೆ ಮಾಡಬೇಕು ಎಂದು ಶಾಸಕ ರಾಜಶೇಖರ ಪಾಟೀಲ ಹುಮನಾಬಾದ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನ ರಾಜೇಶ್ವರ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಡೆಯುತ್ತಿರುವ ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲಿಸಿದ ಶಾಸಕರು, ಕೆಲಸ ಮಾಡುವಾಗ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಬೇಕು. ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸ್ಥಳದಲಿದ್ದ ಅಧಿಕಾರಿಗಳಿಗೆ ಸಲಹೆ ನೀಡಿದರು.
ಬಡ ಕೂಲಿ ಕಾರ್ಮಿಕರ ಕುಟುಂಬಗಳಿಗೆ ಉದ್ಯೋಗ ಕಲ್ಪಿಸುವುದೇ ನರೇಗಾ ಯೋಜನೆಯ ಮೂಲ ಉದ್ದೇಶವಾಗಿದೆ. ಲಾಕ್‌ಡೌನ್‌ನಿಂದಾಗಿ ಬಡ ಜನರಿಗೆ ಆರ್ಥಿಕ ಸಮಸ್ಯೆ ಕಾಡುತ್ತಿರುವುದನ್ನು ಗಮನಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಕೂಲಿ ಹಣವನ್ನೂ ಹೆಚ್ಚಿಸಲಾಗಿದೆ. ಪ್ರತಿಯೊಬ್ಬರು ಇದರ ಲಾಭ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ನಂತರ ರಾಜೇಶ್ವರ ಗ್ರಾಮದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಆರೋಗ್ಯ ಕೇಂದ್ರದಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಬೇಕು. ಇಲ್ಲಿಗೆ ಬರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು ಎಂದು ಸೂಚಿಸಿದರು.