ಬೀದರ್: ಕೊರೊನಾ ವೈರಸ್ ಸೊಂಕು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದ್ದು, ಜಿಲ್ಲೆಯಾದ್ಯಂತ ಖಾಸಗಿ ವಾಹನಗಳ ಓಡಾಟ ಬಂದ್ ಮಾಡಿ ಆದೇಶ ಹೊರಡಿಸಿದೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ಸಭೆ ನಡೆಸಿದ ಡಿಸಿ ಡಾ.ಎಚ್.ಆರ್ ಮಹದೇವ್, ಪ್ರಯಾಣಿಕರನ್ನು ಹೊತ್ತು ತರುವ ಖಾಸಗಿ ವಾಹನಗಳ ಸಂಚಾರ ಬಂದ್ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಕ್ರೂಜರ್, ಟ್ಯಾಕ್ಸಿ, ಆಟೋ ಸೇರಿದಂತೆ ಖಾಸಗಿ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿಯಲ್ಲಿದ್ದು, ಅಂಗಡಿ, ಮುಗ್ಗಟ್ಟುಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ. ಮೂರು ಹಾಗೂ ನಾಲ್ಕನೇ ವಾರದಲ್ಲಿ ಕೊರೊನಾ ವೈರಸ್ ತೀವ್ರ ಹರಡುವ ಸಾಧ್ಯತೆಯಿದೆ ಎಂದು ತಜ್ಞರ ಅಭಿಪ್ರಾಯ ಪಟ್ಟ ಹಿನ್ನೆಲೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು.
ಗೃಹ ಬಂಧನ ಶಿಕ್ಷೆಯಲ್ಲ ಎಂಬುದನ್ನು ಮನವರಿಕೆ ಮಾಡಿಕೊಟ್ಟು ಹೊಂ ಕ್ವಾರಂಟೈನ್ ನಲ್ಲಿರುವವರ ಮೇಲೆ ತೀವ್ರ ನಿಗಾ ವಹಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಗ್ಯಾನೇಂದ್ರ ಗಂಗ್ವಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ಡಿ.ಎಲ್, ಡಿಎಚ್ಓ ಡಾ.ವಿ.ಜಿ.ರೆಡ್ಡಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕೊರೊನಾ ವಾರ್ಡ್ಗೆ ಭೇಟಿ:
ಜಿಲ್ಲಾಧಿಕಾರಿ ಡಾ.ಎಚ್.ಆರ್ ಮಹದೇವ್ ಸೇರಿದಂತೆ ಅಧಿಕಾರಿಗಳ ತಂಡ ಬ್ರಿಮ್ಸ್ ಜಿಲ್ಲಾ ಆಸ್ಪತ್ರೆಯಲ್ಲಿ ತೆರೆಯಲಾದ ಕೊರೊನಾ ವೈರಸ್ ವಿಶೇಷ ವಾರ್ಡ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ ಶಂಕಿತ ಕೊರೊನಾ ಪೀಡಿತರ ಚಿಕಿತ್ಸೆ ಸರಿಯಾಗಿ ನಡೆಸುವಂತೆ ಸೂಚನೆ ನೀಡಿದರು.