ಬೀದರ್: ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಹುಟ್ಟು ಹಬ್ಬದ ಹಿನ್ನೆಲೆ 50 ಜನ ಕಾರ್ಯಕರ್ತರು ರಕ್ತದಾನ ಮಾಡುವ ಮೂಲಕ ವಿಶಿಷ್ಟವಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ಜಿಲ್ಲೆಯ ಭಾಲ್ಕಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ ಸಮ್ಮುಖದಲ್ಲಿ ಕಾರ್ಯಕರ್ತರು ರಕ್ತದಾನ ಮಾಡುವ ಮೂಲಕ ರಾಹುಲ್ ಗಾಂಧಿ ಅವರ ಹುಟ್ಟು ಹಬ್ಬ ಆಚರಿಸಿದರು.
ಈ ವೇಳೆಯಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ದೇಶದ ಅಭಿವೃದ್ಧಿ ಹಾಗೂ ಬೆಳವಣಿಯಲ್ಲಿ ಗಾಂಧಿ ಮನೆತನದ ಕೊಡುಗೆ ಅಪಾರವಾಗಿದೆ. ಇಂದಿರಾ ಗಾಂಧಿ, ರಾಜೀವ್ ಗಾಂಧಿ ದೇಶದ ಪ್ರಧಾನಿಗಳಾಗಿ ವಿಶಿಷ್ಟ ಕೊಡುಗೆ ನೀಡಿದ್ದಾರೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿ ಆ ಸ್ಥಾನದಲ್ಲಿ ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರನ್ನು ಪ್ರಧಾನಿಯನ್ನಾಗಿ ಮಾಡಿ ದೇಶದ ಅಭಿವೃದ್ಧಿಗೆ ಸಾಥ್ ನೀಡಿದ್ದರು ಎಂದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಹಾನುಭೂತಿಯ ನಾಯಕರಾಗಿದ್ದು, ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಅವರ ಜನ್ಮ ದಿನವಾದ ಇಂದು ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುತ್ತಿರುವುದು ಸಂತಸ ತಂದಿದೆ ಎಂದರು.