ಬಸವಕಲ್ಯಾಣ : ಕಳೆದ ಕೆಲವು ದಿನಗಳಿಂದ ದೆಹಲಿಯಲ್ಲಿ ನಡೆಸುತ್ತಿರುವ ರೈತ ಆಂದೋಲನಕ್ಕೆ ಬೆಂಬಲಿಸಿ ಮಹಾರಾಷ್ಟ್ರ ವಿಕಾಸ ಆಘಾಡಿ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ರ‍್ಯಾಲಿಗೆ ಬಸವಕಲ್ಯಾಣದಿಂದ ಚಾಲನೆ ನೀಡಲಾಗಿದೆ.
ಮಂಗಳವಾರ ನಗರದ ಶ್ರೀ ಬಸವೇಶ್ವರ ವೃತ್ತದಲ್ಲಿ ಕುರಿ ಮತ್ತು ಉಣ್ಣೆ ನಿಗಮದ ಮಾಜಿ ಅಧ್ಯಕ್ಷ ಪಂಡಿತ ಚಿದ್ರಿ ರ‍್ಯಾಲಿಗೆ ಚಾಲನೆ ನೀಡಿದರು. ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ನಡೆಯಲಿರುವ ಈ ರ‍್ಯಾಲಿ, ಮಹಾರಾಷ್ಟ್ರದ 9 ಜಿಲ್ಲೆಗಳಲ್ಲಿ ಹಾದು ಹೋಗುವ ಮೂಲಕ ಜ. 30ರಂದು ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ಸಮಾರೋಪಗೊಳ್ಳಲಿದೆ.
ಕುರಿ ಮತ್ತು ಉಣ್ಣೆ ನಿಗಮದ ಮಾಜಿ ಅಧ್ಯಕ್ಷ ಮಾತನಾಡಿ, ಸರ್ಕಾರ ಜಾರಿಗೆ ತಂದಿರುವ ಈ ಕೃಷಿ ಕಾಯ್ದೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ, ಕೂಡಲೇ ಈ ಕಾಯ್ದೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ಮಹಾರಾಷ್ಟ್ರ ವಿಕಾಸ ಆಘಾಡಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಣ್ಣಾರಾವ್ ಪಾಟೀಲ ಮಾತನಾಡಿ, ಅದಾನಿ ಹಾಗೂ ಅಂಬಾನಿಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆ ಜಾರಿಗೆ ತಂದಿದೆ. ರೈತರಿಗೆ ಮಾರಕವಾಗಿರುವ ಕಾನೂನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.
ಈ ರ‍್ಯಾಲಿಯಲ್ಲಿ ಮಹಾರಾಷ್ಟ್ರ ವಿಕಾಸ ಆಘಾಡಿ ಪಕ್ಷದ ರಾಜ್ಯಾಧ್ಯಕ್ಷ ಮಂಚಕ ಡೋಣೆ, ಉಪಾಧ್ಯಕ್ಷ ಬಸವಂತಪ್ಪಾ ಉಬಾಳೆ, ರಾಷ್ಟ್ರೀಯ ಪ್ರವಕ್ತ ಡಾ.ಸುರೇಶ ವಾಗಮಾರೆ, ಮಾಳಪ್ಪ ಅಡಸಾರೆ, ಮಹಾದೇವ ಪೂಜಾರಿ ಸೇರಿದಂತೆ ಸುಮಾರು 150ಕ್ಕೂ ಹೆಚ್ಚು ಜನರು ರ‍್ಯಾಲಿಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ:ಹಿಂಸಾರೂಪಕ್ಕೆ ತಿರುಗಿದ ರೈತರ ಪ್ರತಿಭಟನೆ: ದೆಹಲಿಯ ಕೆಲವೆಡೆ ಇಂಟರ್ನೆಟ್ ಸೇವೆ ಸ್ಥಗಿತ