ಬಸವಕಲ್ಯಾಣ: ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥೆ ಮಾಡಬೇಕು ಎಂದು ಶಾಸಕ ಬಿ. ನಾರಾಯಣರಾವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ತಾಲೂಕಿನ ಹಿರನಾಗಾಂವ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಡೆಯುತ್ತಿರುವ ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲಿಸಿದ ಶಾಸಕರು, ಕೆಲಸ ಮಾಡುವಾಗ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಬೇಕು. ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸಲಹೆ ನೀಡಿದರು.
ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ಮಾಡುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಬಡ ಕೂಲಿ ಕಾರ್ಮಿಕರ ಕುಟುಂಬಗಳಿಗೆ ಉದ್ಯೋಗ ಕಲ್ಪಿಸುವುದೇ ನರೇಗಾ ಯೋಜನೆಯ ಮೂಲ ಉದ್ದೇಶವಾಗಿದೆ. ಲಾಕ್ಡೌನ್ನಿಂದಾಗಿ ಬಡ ಜನರಿಗೆ ಆರ್ಥಿಕ ಸಮಸ್ಯೆ ಕಾಡುತ್ತಿರುವುದನ್ನು ಗಮನಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಕೂಲಿ ಹಣವನ್ನೂ ಹೆಚ್ಚಿಸಲಾಗಿದೆ. ಪ್ರತಿಯೊಬ್ಬರೂ ಇದರ ಲಾಭ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ನರೇಗಾ ಯೋಜನೆಯಡಿ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಕೆಲಸ ಆರಂಭಿಸಲು ಸೂಚಿಸಲಾಗಿದೆ. ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ತಾಲೂಕು ಪಂಚಾಯತ್ ಅಧ್ಯಕ್ಷೆ ಯಶೋಧಾ ನೀಲಕಂಠ ರಾಠೋಡ್, ಜಿಪಂ ಸದಸ್ಯ ರಾಜಶೇಖರ ಮೇತ್ರೆ, ಮುಖಂಡ ನೀಲಕಂಠ ರಾಠೋಡ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.