ಮೈಸೂರು/ ಬೀದರ್: ದೆಹಲಿ ಜಾಮಿಯಾ ಇಸ್ಲಾಮಿಯಾ ವಿವಿ ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಹಲ್ಲೆ ಖಂಡಿಸಿ ಮತ್ತು ಸಿಎಬಿ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಮಾನಸ ಗಂಗೋತ್ರಿಯ ಸಂಶೋಧನ ವಿದ್ಯಾರ್ಥಿಗಳು ಹಾಗೂ ಬೀದರ್ನಲ್ಲಿ ಸ್ಟೂಡೆಂಟ್ ಇಸ್ಲಾಮಿಕ್ ಸಂಘಟನೆಯಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು.
ಕೇಂದ್ರ ಸರ್ಕಾರದ ವಿರುದ್ಧ ಸಿಡಿದಿದ್ದ, ವಿದ್ಯಾರ್ಥಿಗಳು ಕರ್ನಾಟಕದಲ್ಲಿಯೂ ಕೂಡ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸರ್ಕಾರ ಜಾರಿ ತಂದಿರುವ ಪೌರತ್ವ ತಿದ್ದುಪಡಿ ಮಸೂದೆ ವಾಪಸ್ ಪಡೆಯುವಂತೆ ಆಗ್ರಹಿಸಿದ್ದಾರೆ.
ಮಾನಸಗಂಗೋತ್ರಿಯ ಕ್ಲಾಕ್ ಟವರ್ ಮುಂಭಾಗದಿಂದ, ಪಂಜಿನ ಮೆರವಣಿಗೆ ನಡೆಸಿದ ಸಂಶೋಧನಾರ್ಥಿಗಳು ಗಂಗೋತ್ರಿಯ ಕುವೆಂಪು ಪುತ್ಥಳಿ ವೃತ್ತದ ಮುಂದೆ ಜಮಾಯಿಸಿ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ದೇಶವಾಸಿಗಳನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿ, ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಪ್ರಜೆಗಳೆಂದು ಬಿಂಬಿಸಲು ಹೊರಟ್ಟಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನದ ಆಶಯವನ್ನು ಬುಡಮೇಲು ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಅಸಮಧಾನ ಹೊರಹಾಕಿದರು.
ಬೀದರ್ ನಗರದ ಅಂಬೇಡ್ಕರ ವೃತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಿದ ಸ್ಟೂಡೆಂಟ್ ಇಸ್ಲಾಮಿಕ್ ಸಂಘಟನೆ ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೊದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು, ಇದೇ ವೇಳೆ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.