ಬೆಂಗಳೂರು : ರಾಜ್ಯದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನ, ಪರಿಶೀಲನೆ ಕುರಿತು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಇಂದು ಕೆಎಸ್‍ಎಫ್‍ಸಿ ಸಭಾಂಗಣದಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯಭಾಸ್ಕರ್ ಅವರೊಂದಿಗೆ ಚರ್ಚೆ ನಡೆಸಿದರು.
ರಾಜ್ಯದ ಬರ ಪರಿಸ್ಥಿತಿ ನಿರ್ವಹಣೆ, ಆಯವ್ಯಯದಲ್ಲಿ ಘೋಷಿಸಿದ ಕಾರ್ಯಕ್ರಮಗಳನ್ನು ನಿಗದಿತ ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಿಎಂ ಸೂಚಿಸಿದರು.
ಈ ಕುರಿತು ಚರ್ಚಿಸಲು ಶೀಘ್ರವೇ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ಕರೆಯುವಂತೆ ಇದೇ ವೇಳೆ ಸಿಎಂ ಕುಮಾರಸ್ವಾಮಿ ಅವರು ನಿರ್ದೇಶನ ನೀಡಿದರು. ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಯಾವುದೇ ಲೋಪವಾಗಿದ್ದರೆ, ನಿಧಾನವಾಗುತ್ತಿದ್ದರೆ, ಇದಕ್ಕೆ ಕಾರಣಗಳನ್ನು ಅರಿತು ಸಮಸ್ಯೆ ನಿವಾರಿಸುವಂತೆ ಹಾಗೂ ಈ ನಿಟ್ಟಿನಲ್ಲಿ ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸುವಂತೆ ಸೂಚಿಸಿದರು.
ರಾಜ್ಯದಲ್ಲಿ ಶಿಕ್ಷಣ, ಆರೋಗ್ಯ ಹಾಗೂ ವಸತಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಶಿಕ್ಷಣದ ಗುಣಮಟ್ಟ ಖಾತರಿ ಪಡಿಸಲು ಹಾಗೂ ಶಾಲಾ ಕಾಲೇಜುಗಳ ಮೂಲಸೌಕರ್ಯಕ್ಕೆ ಆದ್ಯತೆ ನೀಡಲು ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಆಂಗ್ಲ ಮಾಧ್ಯಮ ಶಾಲೆಗಳ ಪ್ರಾರಂಭದ ಕುರಿತ ವಿವರಗಳನ್ನು ಪಡೆದು, ಈ ಶಾಲೆಗಳಲ್ಲಿ ಅತ್ಯುತ್ತಮ ಶಿಕ್ಷಣ ದೊರಕುವಂತೆಯೂ ಖಾತರಿ ಪಡಿಸುವಂತೆ ಸೂಚಿಸಿದರು.
ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುವಂತೆ ಸಲಹೆ ನೀಡಿದರು. ವಸತಿ ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ದೊರೆಯುವುದನ್ನು ಖಾತರಿ ಪಡಿಸಲು ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು.
ಇನ್ನು ನಗರ ಪ್ರದೇಶದಲ್ಲಿ ಮೂಲಸೌಕರ್ಯ, ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಬೇಕು. ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ಕ್ರಮ ವಹಿಸಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ ಇ.ವಿ ರಮಣರೆಡ್ಡಿ, ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್ ಅವರು ಉಪಸ್ಥಿತರಿದ್ದರು.