ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಆರು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದೇವೆ ಎಂದು ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಜೆ.ಪಟೇಲ್ ತಿಳಿಸಿದ್ದಾರೆ.
ನಗರದ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕೋಲಾರ, ತುಮಕೂರು, ಬಾಗಲಕೋಟೆ, ಚಿಕ್ಕಬಳ್ಳಾಪುರ, ಬಳ್ಳಾರಿ, ಚಿಕ್ಕೋಡಿಯಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಚಿಂತನೆ ನಡೆಸಲಾಗಿದೆ. ಇತರ ಕ್ಷೇತ್ರಗಳಲ್ಲಿ ಬಿಜೆಪಿ ಜೊತೆಗೆ ಹೊಂದಾಣಿಕೆ ಮಾಡಲು ಮುಂದಾಗಿದ್ದೇವೆ ಎಂದು ವಿವರಿಸಿದರು.
ಹೊಂದಾಣಿಕೆ ಸಂಬಂಧ ಬಿಜೆಪಿ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದೇವೆ. ದಾವಣಗೆರೆಯಲ್ಲಿ ಬಿಜೆಪಿಗೆ ಬೆಂಬಲ ನೀಡಲು ಜೆಡಿಯು ನಿರ್ಧರಿಸಿದೆ. ನಾನು ಈ ಬಾರಿ ಸ್ಪರ್ಧಿಸುವುದಿಲ್ಲ. ಆದರೆ ನಮ್ಮ ಪಕ್ಷ ಸಂಘಟನೆ ಇರುವ ಆರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.
ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸುಮಲತಾ ಬೆಂಬಲ ಕೋರಿದರೆ ಜೆಡಿಯು ವತಿಯಿಂದ ಬೆಂಬಲ ನೀಡುತ್ತೇವೆ. ಅಂಬರೀಶ್ ಅವರು ಜೆ.ಹೆಚ್.ಪಟೇಲ್ ಅವರಿಗೆ ಆತ್ಮೀಯರಾಗಿದ್ದವರು. ಮಂಡ್ಯದಲ್ಲಿ ಸುಮಲತಾಗೆ ಕಾಂಗ್ರೆಸ್ ಟಿಕೆಟ್ ನೀಡಬೇಕಿತ್ತು. ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಕೂಡ ನಮಗೆ ಆಪ್ತರು. ಆದರೆ ಅವರಿಗೆ ಇನ್ನೂ ಸಮಯಾವಕಾಶ ಇದೆ ಎಂದರು.