ಬೆಂಗಳೂರು: ಚಿಂಚೋಳಿ ಹಾಗೂ ಕುಂದಗೋಳ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುವುದಿಲ್ಲ. ಬದಲಾಗಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸುವುದಾಗಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ.
ಪದ್ಮನಾಭನಗರದ ತಮ್ಮ ನಿವಾಸದ ಬಳಿ ಇಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರಕ್ರಿಯಿಸಿದ ಅವರು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದರು. ಹಾಗಾಗಿ, ಆ ಕ್ಷೇತ್ರಗಳಲ್ಲಿ ಜೆಡಿಎಸ್ ಕಣಕ್ಕಿಳಿಯುವುದಿಲ್ಲ. ಕಾಂಗ್ರೆಸ್ನಿಂದ ಅಭ್ಯರ್ಥಿಗಳನ್ನು ಹಾಕುತ್ತಾರೆ. ನಾವು (ಜೆಡಿಎಸ್) ಅವರಿಗೆ ಬೆಂಬಲ ನೀಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ವಿಚಾರ ಕುರಿತು ಸಿಎಂ ಕುಮಾರಸ್ವಾಮಿಯವರು ನೋಡಿಕೊಳ್ಳುತ್ತಾರೆ. ನನಗೆ ಆ ಬಗ್ಗೆ ಹೆಚ್ಚಿನ ಮಾಹಿತಿ ಎಲ್ಲ ಎಂದರು. ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ಉಮೇಶ್ ಜಾಧವ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಗೊಂಡರು. ಇನ್ನು ಕುಂದಗೊಳ ಕ್ಷೇತ್ರದ ಶಾಸಕರಾಗಿ, ಕೆಲ ತಿಂಗಳ ಹಿಂದೆಯಷ್ಟೇ ಸಚಿವರಾಗಿದ್ದ ಸಿ.ಎಸ್. ಶಿವಳ್ಳಿ ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದರು. ಹಾಗಾಗಿ, ಈ ಎರಡೂ ಕ್ಷೇತ್ರಗಳಿಗೆ ಮೇ 19 ರಂದು ಉಪಚುನಾವಣೆ ನಡೆಯಲಿದ್ದು, ಈ ಕ್ಷೇತ್ರಗಳ ಫಲಿತಾಂಶ ಸಹ ಮೇ 23 ರಂದು ಹೊರಬೀಳಲಿದೆ ಎಂದು ಹೆಚ್ಡಿಡಿ ತಿಳಿಸಿದರು.
ಇನ್ನು, ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೋಳಿ ರಾಜೀನಾಮೆ ವಿಚಾರಕ್ಕೂ ನಮಗೂ ಸಂಬಂಧ ಇಲ್ಲವೆಂದು ದೇವೇಗೌಡರು ಇದೇ ವೇಳೆ ಸ್ಪಷ್ಟನೆ ನೀಡಿದರು.