ಕೊಳ್ಳೇಗಾಲ: ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
ನಗರದ ಜಿ.ಪಿ. ಮಲ್ಲಪುರಂ ನಿವಾಸಿ ಮನೋಜ್ (24) ಮೃತ ದುರ್ದೈವಿ. ತಾಲೂಕಿನ ಮಧುವನ ಹಳ್ಳಿ ರಸ್ತೆಯ ಖುರ್ಜು ಸಮೀಪ ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಮೈಸೂರಿನಿಂದ ಮಹದೇಶ್ವರ ಬೆಟ್ಟಕ್ಕೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಕೊಳ್ಳೇಗಾಲದ ಕಡೆಗೆ ಆಗಮಿಸುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮ ಬೈಕ್ ಸವಾರ ಮನೋಜ್ ಗಂಭೀರ ಗಾಯಗೊಂಡಿದ್ದು, ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆನಂತರ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮನೋಜ್ ಇಂದು ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.