ಕೊಳ್ಳೇಗಾಲ: ನಗರದ ತಾಲೂಕು ಕಚೇರಿ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವೈಫ್ಯಲ ಖಂಡಿಸಿ ಧಿಕ್ಕಾರ ಕೂಗಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಮಾತನಾಡಿದ ಮಾಜಿ ಶಾಸಕ ಬಾಲರಾಜು, ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ರೈತರ, ಬಡ ಕೂಲಿ ಕಾರ್ಮಿಕರ ವಿರೋಧಿ ನೀತಿಯಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಜನ ವಿರೋಧಿ ನೀತಿ ಅನುಸುರಿಸುತ್ತಿದ್ದು, ಮುಂದಿನ ದಿನಗಳಲ್ಲಿ ತುತ್ತು ಅನ್ನಕ್ಕೂ ಕಷ್ಟ ಪಡುವ ಸ್ಥಿತಿಯನ್ನು ಈ ಸರ್ಕಾರ ಮಾಡುತ್ತದೆ. ಎಪಿಎಂಸಿ ಮತ್ತು ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಮಾಡಿರುವ ಬಿಜೆಪಿ ಸರ್ಕಾರಕ್ಕೆ ನಮ್ಮ ಧಿಕ್ಕಾರವಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಜ್ಯಾದ್ಯಂತ ಇಂದು ಪ್ರತಿಭಟನೆ ಆರಂಭವಾಗಿದ್ದು, ಕಾಯ್ದೆ ತಿದ್ದುಪಡಿಗೆ ಕಾಂಗ್ರೆಸ್ ಕಡಿವಾಣ ಹಾಕುತ್ತದೆ ಎಂದರು.
ಮಾಜಿ ಶಾಸಕ ಎ.ಆರ್.ಕೃಷ್ಣ ಮೂರ್ತಿ ಮಾತನಾಡಿ, ದೇಶದ ಜನರ ಹಿತ ಕಾಯುವುದಾಗಿ ಅಧಿಕಾರ ಹಿಡಿದ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಅಭಿವೃದ್ಧಿ ಯೋಜನೆಗಳನ್ನು ವ್ಯವಸ್ಥಿತವಾಗಿ ರೂಪಿಸುವುದರಲ್ಲಿ ಸಂಪೂರ್ಣ ವಿಫಲವಾಗಿವೆ. ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರು ಪ್ರತಿಭಟಿಸುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಧಿಕಾರ ದೂರುಪಯೋಗಪಡಿಸಿಕೊಳ್ಳುತ್ತಿವೆ ಎಂದು ಆರೋಪಿಸಿದ್ದಾರೆ.