ಮೈಸೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ 24 ಕೊರೊನಾ ರೋಗಿಗಳು ಸಾವನ್ನಪ್ಪಿದ್ದಾರೆ. ಈ ದುರಂತಕ್ಕೆ ಅಲ್ಲಿನ ಜಿಲ್ಲಾಡಳಿತದ ಸಂಪೂರ್ಣ ನಿರ್ಲಕ್ಷ್ಯವೇ ಕಾರಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಧ್ರುವನಾರಾಯಣ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುನ್ನೆಚ್ಚರಿಕೆ ಕ್ರಮ ವಹಿಸಿದರೆ ಇಂತಹ ದೊಡ್ಡ ಅನಾಹುತ ತಪ್ಪಿಸಬಹುದಿತ್ತು. ಸಂಸದರು, ಜಿಲ್ಲಾ ಉಸ್ತುವಾರಿ, ಜಿಲ್ಲಾಧಿಕಾರಿಯ ನಿರ್ಲಕ್ಷ್ಯದಿಂದ ಇಂತಹ ಘಟನೆ ನಡೆದಿದೆ. ಇದು ದೊಡ್ಡ ಕ್ರಿಮಿನಲ್ ಅಪರಾಧವಾಗಿದೆ ಎಂದು ಕಿಡಿಕಾರಿದರು.
ಅಲ್ಲಿನ ಸಚಿವರ, ಡಿಸಿ ಜೊತೆ ಭಾನುವಾರ ದೂರವಾಣಿ ಮೂಲಕ ಸಂಪರ್ಕಿಸಿದ್ದೆ. ಆದರೆ ಅವರಿಬ್ಬರು ಸಂಪರ್ಕಕ್ಕೆ ಸಿಗಲಿಲ್ಲ. ಇಂದು ಬೆಳಗ್ಗೆ ಸಚಿವರು ಕರೆ ಮಾಡಿ ಸಮಸ್ಯೆ ಬಗೆಹರಿಸುವುದಾಗಿ ಹೇಳಿದರು. ಒಂದು ವಾರದ ಹಿಂದೆಯೇ ಜಿಲ್ಲೆಯಲ್ಲಿ ಸಮಸ್ಯೆ ಇದೆ ಎಂದು ಗೊತ್ತಿದ್ದರೂ ಅಪರಾಧವಾಗಿದೆ ಎಂದರು.
ಇದನ್ನೂ ಓದಿ: ಚಾಮರಾಜನಗರದಲ್ಲಿ ಭೀಕರ ದುರಂತ: 24 ಸಾವು, ಆಕ್ಸಿಜನ್ ಸಿಗದೆ 12 ಮಂದಿ ಕೊನೆಯುಸಿರು
ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ಕೊಡಲೇಬೇಕು. ಈ ಘಟನೆ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಬೇಕು. ತಪ್ಪಿತಸ್ಥ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದು ಆಗ್ರಹಿಸಿದರು.