ಚಾಮರಾಜನಗರ: ಅರಣ್ಯ ಸಚಿವ ಸಿ.ಸಿ.ಪಾಟೀಲ್ ನಿನ್ನೆ ಹಾಗೂ ಇಂದು ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ನಿನ್ನೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಭೇಟಿ ನಿಡಿದ ಸಚಿವ ಚಿನ್ನದ ರಥ ಸೇವೆ ಹಾಗೂ ಅಭಿಷೇಕ ಪೂಜೆಯಲ್ಲಿ ಭಾಗವಹಿಸಿದ್ದರು. ಇಂದು ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಗೋಪಾಲಸ್ವಾಮಿ ಬೆಟ್ಟದ ಅರ್ಚಕ ಗೋಪಿ ಅವರು ಈಟಿವಿ ಭಾರತಕ್ಕೆ ಪ್ರತಿಕ್ರಿಯಿಸಿ, ಅರಣ್ಯಕ್ಕೆ ಯಾವುದೇ ಬೆಂಕಿ ಬೀಳದಿರಲಿ- ಸಚಿವರ ಇಷ್ಟಾರ್ಥಗಳು ಈಡೇರಲಿ ಎಂದು ಸಂಕಲ್ಪ ಮಾಡಿ ಪೂಜೆ ಸಲ್ಲಿಸಲಾಯಿತು ಎಂದರು. ಇದು ಸಚಿವರ ಖಾಸಗಿ ಭೇಟಿಯಾಗಿದ್ದು, ಸಂಕ್ರಾಂತಿ ವೇಳೆ ಸಚಿವ ಸಂಪುಟ ವಿಸ್ತರಣೆ ಆಗುವ ಮುನ್ಸೂಚನೆ ಇರುವುದರಿಂದ ಸಚಿವರು ದೇವರ ಮೊರೆ ಹೋಗಿದ್ದಾರೆ ಎನ್ನಲಾಗುತ್ತಿದೆ.
ಇನ್ನು, ಸಚಿವರ ಪ್ರವಾಸ ಪಟ್ಟಿಯಲ್ಲಿ ಬಿಳಿಗಿರಿರಂಗನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ಇತ್ತಾದರೂ ಸಮಯದ ಅಭಾವದಿಂದ ಎಚ್.ಡಿ.ಕೋಟೆಗೆ ಪ್ರಯಾಣ ಬೆಳೆಸಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.