ಚಾಮರಾಜನಗರ: ಆಕ್ಸಿಜನ್ ದುರಂತದ ಬಳಿಕ ವಿಪಕ್ಷಗಳು ವ್ಯಾಪಕ ಟೀಕೆಗಳನ್ನು ಮಾಡಿವೆ. ಸದ್ಯ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ 3 ದಿನ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಕೋವಿಡ್ ನಿಯಂತ್ರಣ ಸಭೆ ಹಾಗೂ ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಲಿದ್ದಾರೆ.
ಇಂದು 3 ಗಂಟೆಗೆ ಅಧಿಕಾರಿಗಳ ಸಭೆ ನಡೆಸಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಲಿದ್ದು, ಗುರುವಾರ ಶಾಸಕರು ಮತ್ತು ಅಧಿಕಾರಿಗಳೊಂದಿಗೆ ಕೋವಿಡ್ ನಿಯಂತ್ರಣ ಸಭೆ ನಡೆಸಿ ಜಿಲ್ಲೆಯ ವಿವಿಧ ಆಸ್ಪತ್ರೆಗಳಿಗೆ ಭೇಟಿ ಕೊಡಲಿದ್ದಾರೆ. ಶುಕ್ರವಾರವೂ ಅಧಿಕಾರಿಗಳ ಸಭೆ ನಡೆಸಿ ಆಸ್ಪತ್ರೆಗಳಿಗೆ ಭೇಟಿ ನೀಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಇದನ್ನೂ ಓದಿ: ಆರೋಪಗಳಿಂದ ಬಹಳ ನೊಂದಿದ್ದೇನೆ: ಭಾವುಕರಾದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ
ಮಂಗಳವಾರ ವಿಪಕ್ಷ ನಾಯಕ ಸಿದ್ದರಾಮಯ್ಯ ನಡೆಸಿದ ಸಭೆಯಲ್ಲಿ ಕೋವಿಡ್ ಎರಡನೇ ಅಲೆಯ ಮುನ್ನೆಚ್ಚರಿಕೆ ಸಭೆಗಳನ್ನೇ ಸಚಿವರು ನಡೆಸಿಲ್ಲ, ಬೇಜವಾಬ್ದಾರಿ ತೋರಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದರು. ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ, ಜಿಲ್ಲಾ ಉಸ್ತುವಾರಿ ಮಂತ್ರಿ ಬೆಂಗಳೂರಿನಲ್ಲಿ ಮಜಾ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದರು. ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.