ಚಾಮರಾಜನಗರ: ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಇಂದು ನಗರದಲ್ಲಿ ಕನ್ನಡಪರ ಸಂಘಟನೆಗಳು, ಎಸ್ಡಿಪಿಐ ಹಾಗೂ ಕಾಂಗ್ರೆಸ್ ಪ್ರತ್ಯೇಕವಾಗಿ ಪ್ರತಿಭಟಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದವು.
ಕೇಂದ್ರ ಬಿಜೆಪಿ ನೇತೃತ್ವದ ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಜಿಲ್ಲಾಡಳಿತ ಭವನದ ಆವರಣದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಮೀಸಲಾತಿ ಕುರಿತು ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ವ್ಯಾಖ್ಯಾನದ ಮರುಪರಿಶೀಲನಾ ಅರ್ಜಿಯನ್ನು ಕೇಂದ್ರ ಸರ್ಕಾರ ಸಲ್ಲಿಸಬೇಕೆಂದು ಶಾಸಕ ಪುಟ್ಟರಂಗಶೆಟ್ಟಿ, ಮಾಜಿ ಸಂಸದ ಆರ್. ಧ್ರುವನಾರಾಯಣ ಒತ್ತಾಯಿಸಿದರು.
ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಚಾಮರಾಜೇಶ್ವರ ದೇಗುಲ ಮುಂಭಾಗದಿಂದ ಭುವನೇಶ್ವರಿ ವೃತ್ತದವರೆಗೆ ಖಾಲಿ ಸಿಲಿಂಡರ್ ಪ್ರದರ್ಶಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಈ ವೇಳೆ, ರಾಷ್ಟ್ರೀಯ ಹೆದ್ದಾರಿ 209ರಲ್ಲಿ ರಸ್ತೆ ತಡೆ ನಡೆಸಿ ಎಲ್ಪಿಜಿ ದರ ಇಳಿಸುವಂತೆ ಕೇಂದ್ರ ಸರ್ಕಾರವನ್ನು ಪ್ರತಿಭಟನಾಕಾರರು ಒತ್ತಾಯಿಸಿದರು.
ಬಳಿಕ ಎಲ್ಪಿಜಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರದ ವಿರುದ್ದ ಎಸ್ಡಿಪಿಐ ಜಿಲ್ಲಾಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಸಿತು. ಜಿಲ್ಲಾಡಳಿತ ಕಚೇರಿಯ ಮುಂದೆ ಅಡುಗೆ ಮಾಡಿ ಎಸ್ಡಿಪಿಐ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಇಳಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.