ಚಾಮರಾಜನಗರ: ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳಿಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ತಿಳಿಸಿದ್ದಾರೆ.
ಕೋವಿಡ್ ಮುನ್ನೆಚ್ಚರಿಕೆ ಕುರಿತು ಅವರು ಫೇಸ್ಬುಕ್ ಲೈವ್ನಲ್ಲಿ ಮಾತನಾಡಿ, ಹೊರ ಜಿಲ್ಲೆಗಳಿಂದ ಬರುವ ಪ್ರವಾಸಿಗರು ಸೋಂಕು ಪಸರಿಸುವ ಸಾಧ್ಯತೆ ಇರುವುದರಿಂದ ಎಲ್ಲಾ ಪ್ರೇಕ್ಷಣೀಯ ಸ್ಥಳಗಳಿಗೆ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ. ಜೊತೆಗೆ ಅಂತರ್ ಜಿಲ್ಲೆಗಳಿಂದ ಅನಗತ್ಯವಾಗಿ ಬರುವ ಜನರನ್ನು ನಿಯಂತ್ರಿಸಲು ಚೆಕ್ ಪೋಸ್ಟ್ಗಳನ್ನು ತೆರೆಯಲಾಗಿದ್ದು, ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ನಾಲ್ ರೋಡ್ ಹಾಗೂ ಪಾಲಾರ್ ಚೆಕ್ ಪೋಸ್ಟ್ಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ ಎಂದರು.
ಸೇವಾ ಸಿಂಧು ಆ್ಯಪ್ ಮೂಲಕ ನೋಂದಣಿ ಮಾಡಿಸಿಕೊಂಡು ಬಂದವರು ಸಾಂಸ್ಥಿಕ ಕ್ವಾರಂಟೈನ್ಗೆ ಒಳಗಾಗಬೇಕು. ಗೂಡ್ಸ್ ಚಾಲಕರಲ್ಲಿ ಕೊರೊನಾ ಪ್ರಕರಣಗಳು ಕಂಡು ಬರುತ್ತಿರುವ ಹಿನ್ನೆಲೆ ಕೇರಳ ಮತ್ತು ತಮಿಳುನಾಡಿಗೆ ಸರಕು ಸಾಗಾಣೆ ವಾಹನ ಚಾಲಕರು ಹೋಗಿ ಬಂದರೆ ಮೂರು ದಿನಗಳ ಸಾಂಸ್ಥಿಕ ಕ್ವಾರಂಟೈನ್ಗೆ ಒಳಗಾಗಬೇಕು ಎಂದು ತಿಳಿಸಿದ್ದಾರೆ.
ಯಾವುದೇ ರೋಗಲಕ್ಷಣಗಳಿಲ್ಲದ ಸೋಂಕಿತ ವ್ಯಕ್ತಿಗಳನ್ನು ಕೋವಿಡ್ ಆಸ್ಪತ್ರೆ ಬದಲಾಗಿ ಕೋವಿಡ್ ಕೇರ್ ಸೆಂಟರ್ಗೆ ಕಳುಹಿಸಲಾಗುತ್ತಿದೆ. ಸದ್ಯ 21 ಮಂದಿ ಸೋಂಕಿತರು ಕೋವಿಡ್ ಕೇರ್ ಸೆಂಟರ್ನಲ್ಲಿದ್ದಾರೆ ಎಂದರು.