ಚಾಮರಾಜನಗರ: ನೂತನ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಟ್ಟೆ ಪ್ರದರ್ಶಿಸಲು ತೆರಳುತ್ತಿದ್ದ ರೈತರನ್ನು ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ.
ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಚಿವ ಸುರೇಶ್ ಕುಮಾರ್ಗೆ ಕಪ್ಪು ಬಟ್ಟೆ ಪ್ರದರ್ಶಿಸಿ ತಿದ್ದುಪಡಿ ಕಾಯ್ದೆ ವಿರುದ್ಧ ಆಕ್ರೋಶ ಹೊರಹಾಕಲು ರೈತ ಸಂಘ, ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ತೆರಳುತ್ತಿದ್ದಾಗ ಹೊನ್ನೂರು ಪ್ರಕಾಶ್, ಭಾಗ್ಯರಾಜ್ ಸೇರಿದಂತೆ 15ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿ ಕಪ್ಪು ಬಟ್ಟೆ ಪ್ರದರ್ಶನ ವಿಫಲಗೊಳಿಸಿದರು.
ಇದರಿಂದ ರೊಚ್ಚಿಗೆದ್ದ ರೈತರು, ಭುವನೇಶ್ವರಿ ವೃತ್ತದಲ್ಲೇ ಕುಳಿತು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.