ಕೊಳ್ಳೇಗಾಲ: ಕೆಸರು ಗದ್ದೆಯಾದ ರಸ್ತೆಯಲ್ಲೇ ಭತ್ತದ ಸಸಿ ನಾಟಿ ಮಾಡುವ ಮೂಲಕ ಗ್ರಾಮ ಪಂಚಾಯತ್ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ವಿರುದ್ಧ ಸತ್ತೇಗಾಲ ಗ್ರಾಮದ 2ನೇ ವಾರ್ಡ್ ನಿವಾಸಿಗಳು ಪ್ರತಿಭಟನೆ ನಡೆಸಿ ಅಸಮಾಧಾನ ಹೊರಹಾಕಿದರು.
ತಾಲೂಕಿನ ಸತ್ತೇಗಾಲ ಗ್ರಾಮದ 2ನೇ ವಾರ್ಡ್ ರಸ್ತೆಯೂ ಸಂಪೂರ್ಣ ಹಾಳಾಗಿದೆ. ಮಳೆಯಿಂದಾಗಿ ರಸ್ತೆ ಕೆಸರುಗದ್ದೆಯಾಗಿ ಮಾರ್ಪಟ್ಟಿದೆ. ಬಡಾವಣೆ ನಿವಾಸಿಗಳು ಸಂಚರಿಸಲು ಹರಸಾಹಸಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳು ಹಾಗೂ ವಯೋವೃದ್ಧರು ಬಿದ್ದು ಕೈ ಕಾಲು ಗಾಯ ಮಾಡಿಕೊಂಡ ನಿದರ್ಶನಗಳಿವೆ. ಹೀಗಾಗಿ, ಸುಗಮ ಸಂಚಾರಕ್ಕಾಗಿ ರಸ್ತೆ ನಿರ್ಮಾಣ ಮಾಡಿ ಕೊಡಬೇಕು ಎಂದು ನಿವಾಸಿಗಳು ಆಗ್ರಹಿಸಿದರು.
ಈಟಿವಿ ಭಾರತದೊಂದಿಗೆ ಮಾತನಾಡಿದ ಸ್ಥಳೀಯ ನಿವಾಸಿಗಳು, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಪಿಡಿಒಗೆ ನೂತನ ರಸ್ತೆ ನಿರ್ಮಾಣಕ್ಕೆ ಮನವಿ ಮಾಡಿದ್ದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ನಿರ್ಲಕ್ಷಕ್ಕೆ ಬೇಸತ್ತು ರಸ್ತೆಯಲ್ಲೇ ಭತ್ತದ ಸಸಿ ನಾಟಿ ಮಾಡಿದ್ದೇವೆ ಎಂದರು.