ಚಾಮರಾಜನಗರ: ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿದೆ.
ಚಾಮರಾಜನಗರ ತಾಲೂಕಿನ ಮುಕ್ಕಡಹಳ್ಳಿಯ ನಿವಾಸಿ ಸುರೇಶ್ ಶಿಕ್ಷೆಗೊಳಗಾದ ಅಪರಾಧಿ. ನ್ಯಾಯಾಧೀಶ ವಿನಯ್ ಈ ಪ್ರಕರಣದ ವಿಚಾರಣೆ ನಡೆಸಿ ಅಪರಾಧಿಗೆ ಜೀವಾವಧಿ ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಪ್ರಕರಣದ ವಿವರ:
2017ರ ಜು.12ರಂದು ಪತ್ನಿ ರತ್ನಮ್ಮಳ ಜತೆ ಗಲಾಟೆ ಮಾಡಿಕೊಂಡಿದ್ದ ಈತ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದ. ಈ ವೇಳೆ ಅಕ್ಕಪಕ್ಕದ ಮನೆಯವರು ಬೆಂಕಿ ನಂದಿಸಿ ರತ್ನಮ್ಮನನ್ನು ಜಿಲ್ಲಾಸ್ಪತ್ರೆಗೆ ರವಾನಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಯಲ್ಲಿ ದಾಖಲಿಸಿದ್ದರು. ಆದರೆ, ಜು.18ರಂದು ಚಿಕಿತ್ಸೆಗೆ ಸ್ಪಂದಿಸದೆ ರತ್ನಮ್ಮ ಮೃತಪಟ್ಟಿದ್ದರು.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸರ್ಕಾರದ ಪರವಾಗಿ ಅಭಿಯೋಜಕಿ ಉಷಾ ವಾದ ಮಂಡಿಸಿದ್ದರು.