ಕೊಳ್ಳೇಗಾಲ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಶ್ವ ಜನಸಂಖ್ಯಾ ದಿನಾಚರಣೆಯ ಜನ ಜಾಗೃತಿ ರಥಯಾತ್ರೆಗೆ ತಹಶೀಲ್ದಾರ್ ಕುನಾಲ್ ಚಾಲನೆ ನೀಡಿದರು.
ನಗರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಪ್ರಾರಂಭವಾದ ರಥಯಾತ್ರೆಯು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಾಗಿ, ಜನಸಂಖ್ಯೆ ತಡೆಗಟ್ಟುವಿಕೆ ಮತ್ತು ಜನಸಂಖ್ಯೆ ಸ್ಫೋಟದಿಂದಾಗುವ ಸಮಸ್ಯೆಗಳ ಬಗ್ಗೆ ಧ್ವನಿವರ್ಧಕ ಮೂಲಕ ಜಾಗೃತಿ ಮೂಡಿಸಲಾಯಿತು.
ಇದೇ ವೇಳೆ ಮಾತನಾಡಿದ ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಮುನೇದ್ರಮ್ಮ, ವಿಶ್ವ ಜನಸಂಖ್ಯಾ ದಿನಾಚರಣೆ ಹಿನ್ನೆಲೆ ಜಿಲ್ಲೆಯಾದ್ಯಂತ ರಥಯಾತ್ರೆ ಕಾರ್ಯಕ್ರಮ ಆಯೋಜಿಸಲಾಗಿದೆ. ಮಿತಿ ಮೀರಿ ಬೆಳೆಯುತ್ತಿರುವ ಜನಸಂಖ್ಯೆಯ ಕಡಿವಾಣಕ್ಕೆ ಆರೋಗ್ಯ ಇಲಾಖೆಯಿಂದ ಸಿಗುವ ಸೌಲಭ್ಯಗಳು ಹಾಗೂ ಮುಂದಿನ ದಿನಗಳಲ್ಲಿ ಹೆಚ್ಚಿನ ಜನಸಂಖ್ಯೆಯಿಂದ ಎದುರಾಗುವ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಿ ಈ ಮೂಲಕ ಜನಜಾಗೃತಿ ಮಾಡಲಾಗುತ್ತಿದೆ ಎಂದರು.
ಶಿಶು ಮರಣ ಮತ್ತು ತಾಯಿ ಮರಣವನ್ನು ತಡೆಗಟ್ಟಿ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವುದು ವಿಶ್ವ ಜನಸಂಖ್ಯೆ ದಿನಾಚರಣೆಯ ಉದ್ದೇಶವಾಗಿದೆ ಎಂದರು.