ಚಿಕ್ಕಬಳ್ಳಾಪುರ: ಪ್ರತಿ ಮಗುವಿಗೂ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಸರ್ಕಾರಿ ಶಾಲೆಗಳು ಸದೃಢವಾಗಬೇಕು. ಆಗ ಮಾತ್ರ ವಿದ್ಯಾರ್ಥಿಗಳಿಂದ ನವ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಶ್ರೀನಿವಾಸ ಚಾರಿಟೇಬಲ್ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಹಾಗೂ ಎನ್ಎಸ್‌ಎಸ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ.ನವೀನ್ ಶ್ರೀನಿವಾಸ್ ಅಭಿಪ್ರಾಯಪಟ್ಟರು.
ಚಿಕ್ಕಬಳ್ಳಾಪುರ ತಾಲೂಕಿನ ಹೊಸಹುಡ್ಯ ಗ್ರಾಮ ಪಂಚಾಯತ್‌ನ ನೆಲಮಾಕನಹಳ್ಳಿ ಮತ್ತು ಎಲ್ಲಹಳ್ಳಿ ಶಾಲೆಗಳಲ್ಲಿ ಶ್ರೀನಿವಾಸ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿಗಳು ಕ್ಷೀಣಿಸುತ್ತಿರುವ ಕಾರಣ ಶಾಲೆಗಳು ಮುಚ್ಚುವ ಹಂತದಲ್ಲಿವೆ. ದಾಖಲಾತಿಗಳನ್ನು ಹೆಚ್ಚಿಸಿ ಸರ್ಕಾರಿ ಶಾಲೆಗಳ ವೈಭವವನ್ನು ಹೆಚ್ಚಿಸಿವುದು ನಮ್ಮ ಜನಪ್ರತಿನಿಧಿಗಳ ಆದ್ಯ ಕರ್ತವ್ಯ. ಆ ನಿಟ್ಟಿನಲ್ಲಿ ಸಾಮಾಜಿಕ ಕಳಕಳಿ ಹೊಂದಿರುವ ಸಂಘ ಸಂಸ್ಥೆಗಳನ್ನು ಒಗ್ಗೂಡಿಸಿಕೊಂಡು ಶಾಲೆಗಳ ಅಭಿವೃದ್ಧಿ ಮಾಡಿ, ನವ ಸಮಾಜ ನಿರ್ಮಾಣ ಮಾಡಲು ಸಹಕರಿಸಬೇಕು ಎಂದರು. ನಮ್ಮ ಗುರುಗಳಾದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಸಚಿವ ಡಾ.ಆರ್ ಶ್ರೀನಿವಾಸ್ ಹಾಗೂ ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಸ್ ಎನ್ ವೆಂಕಟೇಶ್ ಅವರ ಮಾರ್ಗದರ್ಶನದಲ್ಲಿ ಶ್ರೀನಿವಾಸ ಚಾರಿಟೇಬಲ್ ಟ್ರಸ್ಟ್, ಆರೋಗ್ಯ, ಸಾಮಾಜಿಕ, ಶಿಕ್ಷಣ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸುವ ಗುರಿಯನ್ನು ಹೊಂದಿದೆ ಎಂದು ತಿಳಿಸಿದರು.
ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಮಂಜುನಾಥ್ ಈ ಸಂದರ್ಭದಲ್ಲಿ ಮಾತನಾಡಿ ಡಾ.ನವೀನ್ ಶ್ರೀನಿವಾಸ್ ರವರು ಕಳೆದ ಮೂರು ವರ್ಷಗಳಿಂದ ಸತತವಾಗಿ ನಮ್ಮ ಪಂಚಾಯತ್ ವ್ಯಾಪ್ತಿಯ ಕೇಶ್ವರ ಗ್ರಾಮದಲ್ಲಿ ಎನ್ಎಸ್ಎಸ್ ಶಿಬಿರಗಳನ್ನು ಆಯೋಜಿಸುವ ಮೂಲಕ ಗ್ರಾಮದಲ್ಲಿ ಸ್ವಚ್ಛತೆ, ಆರೋಗ್ಯ, ನೈರ್ಮಲ್ಯದ ಬಗ್ಗೆ ಸಾಕಷ್ಟು ಅರಿವು ಮೂಡಿಸಿ ಯುವ ನಾಗರಿಕನಾಗಿ ತಮ್ಮ ಅನುಪಮ ಸೇವೆಯನ್ನು ಗ್ರಾಮಗಳಿಗೆ ಸಲ್ಲಿಸುತ್ತಿರುವ ವಿಚಾರ ಶ್ಲಾಘನೀಯ ಎಂದರು.
ಕಾರ್ಯಕ್ರಮದಲ್ಲಿ ಎರಡು ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳು ಮತ್ತು ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷರಾದ ಭರತ್, ಉಪಾಧ್ಯಕ್ಷರಾದ ಪವನ್, ನಿರ್ದೇಶಕರಾದ ವಿಘ್ನೇಶ್, ಧನುಷ್, ಶಶಾಂಕ್, ದಿನೇಶ್, ಶಾಲೆಯ ಸಿಬ್ಬಂದಿ ಮುಂತಾದವರು ಹಾಜರಿದ್ದರು.