ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸದ್ಯ ಜಿಲ್ಲೆಯಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳು 17 ಕ್ಕೆ ಏರಿಕೆಯಾಗಿದ್ದು, ಜಿಲ್ಲಾಧಿಕಾರಿ ಆರ್.ಲತಾ ಹಾಗೂ ಜಿಲ್ಲಾ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಸಾರ್ವಜನಿಕರು ಸಾಮಾಜಿಕ ಅಂತರ, ಅನಾವಶ್ಯಕವಾಗಿ ಮನೆಯಿಂದ ಹೊರಗೆ ಬರದಂತೆ ಹಾಗೂ ಪೂರ್ತಿಯಾಗಿ ಬಾಯಿ, ಮೂಗು ಮುಚ್ಚುವಂತೆ ಮಾಸ್ಕ್ ಧರಿಸಲು ಮನವಿ ಮಾಡಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ಸಾಕಷ್ಟು ಜನ ಮಾಸ್ಕ್ ಧರಿಸುತ್ತಿದ್ದಾರೆ. ಆದರೆ ಮಾಸ್ಕ್‌ಗಳನ್ನು ಸರಿಯಾಗಿ ಧರಿಸದೇ ಇರುವುದು ಸೋಂಕು ಹರಡಲು ಕಾರಣವಾಗುತ್ತದೆ.ಮಾಸ್ಕ್ ಧರಿಸದೇ ಇದ್ದವರಿಗೆ ದಂಡ ವಿಧಿಸುವುದು ನಮಗೆ ದೊಡ್ಡ ಕೆಲಸವಲ್ಲ. ಆದರೆ ನೀವೇ ಅದನ್ನು ಪಾಲನೆ ಮಾಡಿದರೆ ಉತ್ತಮ ಎಂದು ಸೂಚಿಸಿದರು.
ಸದ್ಯದ ಸ್ಥಿತಿಯಲ್ಲಿ ಯಾರಿಗೆ ಪಾಸಿಟಿವ್ ಇದೆ ಎಂಬುವುದು ತಿಳಿದು ಬರುತ್ತಿಲ್ಲ. ಪರೀಕ್ಷೆಯ ನಂತರವಷ್ಟೇ ಕೋವಿಡ್ ಸೋಂಕಿರುವುದು ಪತ್ತೆಯಾಗುತ್ತಿದೆ. ಆದ್ದರಿಂದ ಆದಷ್ಟು ಸಾಮಾಜಿಕ ಅಂತರ ಕಾಪಾಡಿಕೊಂಡರೆ ನಮ್ಮ ಅರ್ಧ ಕೆಲಸ ನೀವೆ ಮಾಡಿದಂತೆ ಆಗುತ್ತದೆ ಎಂದು ಹೇಳಿದರು.
ಇದೇ ವೇಳೆ ಎಸ್‌ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಮಾರ್ಗಸೂಚಿ ನೀಡಿದ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ 15,576 ಮಕ್ಕಳು 64 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಜೊತೆಗೆ ಹೆಚ್ಚುವರಿ ಕೊಠಡಿಗಳನ್ನು ತೆರೆಯಲಾಗಿರುತ್ತದೆ. ವಿದ್ಯಾರ್ಥಿಗಳು ಮುಂಚಿತವಾಗಿಯೇ ನಿಮ್ಮ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬಹುದು. ವಿದ್ಯಾರ್ಥಿಗಳು ಗೋಡೆ, ವಸ್ತುಗಳನ್ನು ಮುಟ್ಟದೇ ಸಾಮಾಜಿಕ ಅಂತರ ಕಾಪಾಡಿಕೊಂಡು ಮಾಸ್ಕ್ ಧರಿಸುವಂತೆ ಸಲಹೆ ನೀಡಿದರು.
ಅದೇ ರೀತಿ ಪ್ರತಿಯೊಬ್ಬರಿಗೂ ತಪಾಸಣೆ ನಡೆಸಿ ಪರೀಕ್ಷಾ ಕೊಠಡಿಗೆ ಕಳುಹಿಸಲಾಗುವುದು ಹಾಗೂ ಪರೀಕ್ಷಾ ಕೊಠಡಿಯಿಂದ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ವಿಧಿಸಲಾಗಿದ್ದು ಪೋಷಕರು ಮಕ್ಕಳನ್ನು ಬಿಟ್ಟ ನಂತರ ಸಾಮಾಜಿಕ ಅಂತರ ಪಾಲಿಸುವಂತೆ ಮನವಿ ಮಾಡಿದರು.