ಚಿಕ್ಕಬಳ್ಳಾಪುರ: ಜಿಲ್ಲೆ ಎಸ್ಎಸ್ಎಲ್‌ಸಿ ಪಲಿತಾಂಶ, ನರೇಗಾ ಕಾಮಗಾರಿಯ ಸದ್ಬಳಕೆಯಂತೆ ಇದೀಗ ಕೊರೊನಾ ಸೋಂಕು ಹರಡುವಿಕೆ ನಿಯಂತ್ರಣ ಹಾಗೂ ಗುಣಮುಖರ ಸಂಖ್ಯೆಯಲ್ಲಿ ಹೆಚ್ಚಳ ಕಾಣುವ ಮೂಲಕ ಯಶಸ್ವಿಯಾಗುತ್ತಿದ್ದು, ರಾಜ್ಯಕ್ಕೆ ಮಾದರಿಯಾಗುತ್ತಿದೆ.
ಹೌದು, ಚಿಕ್ಕಬಳ್ಳಾಪುರ ಜಿಲ್ಲೆ ಈಗೀಗ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಹಾಗೂ ಸೋಂಕಿತರ ಗುಣಮುಖದಲ್ಲಿ ಹೆಚ್ಚಳ ಕಾಣುತ್ತಿದ್ದು ಅಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿನಿತ್ಯ ಸೋಂಕಿತರ ಸಂಖ್ಯೆ ಶತಕ ದಾಟುತ್ತಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೀಗ ಸೋಂಕಿತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನದಲ್ಲಿದ್ದು ಹೆಸರುಗಳಿಸಿತ್ತು. ಆದರೆ, ಈಗ ಗುಣಮುಖರ ಸಂಖ್ಯೆಯಲ್ಲಿ ಜಿಲ್ಲೆಯು ಮುಂಚೂಣಿಯಲ್ಲಿದೆ. ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಲ್ಯಾಬ್ ಉದ್ಘಾಟನೆಯಾದಾಗಿನಿಂದ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಯಶಸ್ವಿಯಾಗುತ್ತಿದೆ.
ಸದ್ಯ ಕೊರೊನಾ ಸೋಂಕಿತರಿಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡಲಾಗುತ್ತಿದ್ದು, ಐಸೊಲೇಷನ್ ವಾರ್ಡ್‌ನಲ್ಲಿರುವ ಸೋಂಕಿತರು ಸಹ ಗುಣಮುಖರಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಚಿಕಿತ್ಸೆಗಾಗಿ ಬೆಂಗಳೂರಿಗೆ ಹೋಗುವವರ ಸಂಖ್ಯೆಯೂ ಕಡಿಮೆಯಾಗಿದೆ ಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಗೆ ವರವಾದ ಆರ್‌ಟಿಪಿಸಿಆರ್ ಲ್ಯಾಬ್..
ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಕೆ. ಸುಧಾಕರ್ ರಾಜ್ಯದಲ್ಲೇ ಮೊದಲ ಬಾರಿಗೆ ಜಿಲ್ಲಾ ಕೇಂದ್ರದಲ್ಲಿ ಅತ್ಯಾಧುನಿಕ ಆರ್‌ಟಿಪಿಸಿಆರ್ ಲ್ಯಾಬ್‌ಗೆ ಚಾಲನೆ ನೀಡಿದರು. ಆಗಿನಿಂದ ತ್ವರಿತವಾಗಿ ಗಂಟಲು ದ್ರವ ಪರೀಕ್ಷೆ ನಡೆಸಲು ಸಾಧ್ಯವಾಗಿದ್ದು, ಸೋಂಕು ಹರಡುವುದನ್ನು ತಡೆಗಟ್ಟಲು ಯಶಸ್ವಿಯಾಗಿದೆ. ಜಿಲ್ಲಾ ಕೇಂದ್ರದಲ್ಲಿ 150 ಕೋವಿಡ್ ಬೆಡ್‌ಗಳಿದ್ದು ಅದರಲ್ಲಿ ಬಹುತೇಕ ಎಲ್ಲಾ ಬೆಡ್‌ಗಳಲ್ಲಿಯೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ.